ಕಾಂಗ್ರೆಸ್ ನಾಯಕರು ರಾಜ್ಯದ ಖಜಾನೆ ಖಾಲಿ ಮಾಡಿದ್ದಾರೆ: ಸಿ.ಟಿ. ರವಿ

| Published : Feb 12 2024, 01:35 AM IST / Updated: Feb 12 2024, 08:53 AM IST

CT Ravi

ಸಾರಾಂಶ

ರಾಜಕೀಯ ನಿವೃತ್ತಿ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಮುಗಿಯುತ್ತಾ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿರುಗೇಟು ನೀಡಿದರು.

ಕನ್ನಡಪ್ರಭ ವಾರ್ತೆ ಮೈಸೂರು

ರಾಜಕೀಯ ನಿವೃತ್ತಿ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಮುಗಿಯುತ್ತಾ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿರುಗೇಟು ನೀಡಿದರು.

ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಮೋಸ ಮಾಡಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಭಾನುವಾರ ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಅವರ ರಾಜಕೀಯ ಈಗ ಬದಲಾಗಿದೆ. ಹಾಗಾಗಿಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಿಎಂ ಸ್ಥಾನಕ್ಕಾಗಿ ಹೋರಾಟ ನಡೆಸುವ ಪರಿಸ್ಥಿತಿ ಬಂದಿದೆ. ಹಾಗಾಗಿ ರಾಜಕೀಯದ ವಾಸ್ತವ್ಯತೆ ಅವರಿಗೆ ಅರಿವಾಗುತ್ತಿದೆ. 

ಆ ಕಾರಣದಿಂದಲೇ ಸಿದ್ದರಾಮಯ್ಯ ಅವರು ರಾಜಕೀಯವಾಗಿ ನಿವೃತ್ತಿಯಾಗುವ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.

ವರುಣ ತೆರಿಗೆ, ಕನಕಪುರ ತರಿಗೆ ಎಂದು ಕಾಂಗ್ರೆಸ್ ನಾಯಕರು ರಾಜ್ಯದ ಖಜಾನೆ ಖಾಲಿ ಮಾಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಶೇ. 40 ರಷ್ಟು ಕಮಿಷನ್ ಆರೋಪವನ್ನು ಕಾಂಗ್ರೆಸ್ ನಾಯಕರ ಮೇಲೆ ಮಾಡಿದ್ದಾರೆ. ಅದು ಸರಿಯಾಗಿಯೇ ಇದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ಎಲ್ಲವೂ ಪಕ್ಷದ ಪಾರ್ಲಿಮೆಂಟರಿ ಬೋರ್ಡ್ ಸಭೆಯಲ್ಲಿಯೇ ಚರ್ಚೆ ನಡೆದು ತೀರ್ಮಾನವಾಗುತ್ತದೆ. 

ಮೈಸೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿಲ್ಲ. ಲೋಕಸಭೆ ಚುನಾವಣೆಗೆ ಅಜೆಂಡಾ ಸಿದ್ಧವಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ರಾಜ್ಯದ ಜನರಿಗೆ ತಿಳಿಸುತ್ತೇವೆ. 

ಮೋದಿ ಅವರ ಜನಪ್ರಿಯತೆಯನ್ನು ಮತಗಳನ್ನಾಗಿ ಪರಿವರ್ತಿಸುತ್ತೇವೆ. ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ. 

ಜೆಡಿಎಸ್ ಈಗ ಎನ್‌.ಡಿ.ಎ ಭಾಗವಾಗಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ನವರನ್ನು ಗೌರವದಿಂದ ನೋಡಿಕೊಳ್ಳುತ್ತೇವೆ. ಮೈತ್ರಿಗೆ ಧಕ್ಕೆಯಾಗದಂತೆ ನಡೆದುಕೊಂಡು ಹೋಗುತ್ತೇವೆ ಎಂದು ಅವರು ತಿಳಿಸಿದರು.

ಕಾರ್ಯಕರ್ತರನ್ನು ಮಾನಸಿಕವಾಗಿ ತಯಾರಿಸಿ, ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುವ ರಣ ತಂತ್ರ ಮಾಡುತ್ತೇವೆ. ನಮ್ಮ ಗುರಿ ಏನಿದ್ದರೂ ಮತ್ತೊಮ್ಮೆ ಮೋದಿ ಅವರನ್ನು ಅಧಿಕಾರಕ್ಕೆ ತರುವುದಾಗಿದೆ ಎಂದರು.