ಮಲ್ಲಿಕಾರ್ಜುನ ಖರ್ಗೆ ಆದೇಶಕ್ಕೆ ‘ಹಸ್ತ’ ಮೌನ - ರಾಜಕೀಯ ಪ್ರಶ್ನೆಗಳಿಂದ ಕೈ ನಾಯಕರು ದೂರ

| Published : Jan 20 2025, 11:45 AM IST

Congress flag

ಸಾರಾಂಶ

ಬಹಿರಂಗವಾಗಿ ಮುಖ್ಯಮಂತ್ರಿ ಬದಲಾವಣೆ, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರ ವಿರುದ್ಧ ಹೇಳಿಕೆ ನೀಡುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬ್ರೇಕ್‌ ಹಾಕಿದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದ ಮುಖಂಡರು ಮೌನಕ್ಕೆ ಜಾರಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಕೊಡಲೂ ಕೂಡ ಮುಂದಾಗುತ್ತಿಲ್ಲ.

ಬೆಂಗಳೂರು : ಬಹಿರಂಗವಾಗಿ ಮುಖ್ಯಮಂತ್ರಿ ಬದಲಾವಣೆ, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರ ವಿರುದ್ಧ ಹೇಳಿಕೆ ನೀಡುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬ್ರೇಕ್‌ ಹಾಕಿದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದ ಮುಖಂಡರು ಮೌನಕ್ಕೆ ಜಾರಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಕೊಡಲೂ ಕೂಡ ಮುಂದಾಗುತ್ತಿಲ್ಲ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯಿದೆ. ಹೀಗಾಗಿ ನೀವೆಷ್ಟೇ ಕೇಳಿದರೂ ನಾನು ರಾಜಕೀಯ ವಿಚಾರ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್‌, ರಾಜಕೀಯ ಪ್ರಶ್ನೆಗಳಿಗೆ ಉತ್ತರ ನೀಡಲ್ಲ. ನಮ್ಮ ಎಐಸಿಸಿ ಅಧ್ಯಕ್ಷರು ಹೇಳಿದ್ದಾರೆ. ನೀವೆಷ್ಟೇ ಕೇಳಿದರೂ ನಾನು ರಾಜಕೀಯ ವಿಚಾರ ಮಾತನಾಡಲ್ಲ ಎಂದು ಸ್ಪಷ್ಟಪಡಿಸಿದರು.

ಬಹಿರಂಗ ಹೇಳಿಕೆ ನೀಡಲ್ಲ: ಎಂಬಿಪಾ

ಮಾತನಾಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಮಲ್ಲಿಕಾರ್ಜುನ ಖರ್ಗೆ ಅವರಿಗೆ 50 ವರ್ಷದ ಸುದೀರ್ಘ ಅನುಭವ ಇದೆ. ಅವರ ಸೂಚನೆ ಹಾಗೂ ಮಾತು ಗೌರವಿಸಬೇಕು. ಯಾವುದೇ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ. ಹೀಗಾಗಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ನಾನು ವಿಚಾರ ಬಹಿರಂಗವಾಗಿ ಮಾತನಾಡುವುದಿಲ್ಲ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಹೇಳಿದರು.