ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ ಶಾಸಕರು ಸಜ್ಜು: ಟ್ರಕ್‌ ಟರ್ಮಿನಲ್‌ ಹಗರಣ ಪ್ರಸ್ತಾಪ

| Published : Jul 18 2024, 01:33 AM IST / Updated: Jul 18 2024, 04:37 AM IST

ಸಾರಾಂಶ

 ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ  ವಿಷಯದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ ಶಾಸಕರು ಸಜ್ಜಾಗಿದ್ದು, ಗುರುವಾರ ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನ 200 ಕೋಟಿ ರು. ಅಕ್ರಮವನ್ನು ಪ್ರಸ್ತಾಪಿಸಿ   ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ.

 ಬೆಂಗಳೂರು :  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಕ್ರಮದ ವಿಷಯದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ ಶಾಸಕರು ಸಜ್ಜಾಗಿದ್ದು, ಗುರುವಾರ ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನ 200 ಕೋಟಿ ರು. ಅಕ್ರಮವನ್ನು ಪ್ರಸ್ತಾಪಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ.

ವಿಧಾನಮಂಡಲ ಅಧಿವೇಶನದ ಎರಡು ದಿನವೂ ಬಿಜೆಪಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ಪ್ರಸ್ತಾಪಿಸಿ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ. ಇದಕ್ಕೆ ಪ್ರತ್ಯಸ್ತ್ರವಾಗಿ ಬಿಜೆಪಿ ಅವಧಿಯಲ್ಲಿ ನಿಗಮಗಳಲ್ಲಾಗಿರುವ ಅಕ್ರಮವನ್ನು ಪ್ರಸ್ತಾಪಿಸಲು ಕಾಂಗ್ರೆಸ್ ಶಾಸಕರು ಮುಂದಾಗಿದ್ದಾರೆ. ಮಂಗಳವಾರದ ಚರ್ಚೆ ವೇಳೆ ಭೋವಿ ಅಭಿವೃದ್ಧಿ ನಿಗಮದ ಅಕ್ರಮವನ್ನು ಪ್ರಸ್ತಾಪಿಸಿ ಬಿಜೆಪಿಗೆ ತಿರುಗೇಟು ನೀಡಲಾಗಿತ್ತು. ಇದೀಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ದಾಖಲೆ ಸಹಿತ ಬಹಿರಂಗಪಡಿಸಲು ಕಾಂಗ್ರೆಸ್‌ ಶಾಸಕರು ಸಿದ್ಧತೆ ನಡೆಸಿದ್ದಾರೆ.

ನಿಯಮ 69ರ ಅಡಿಯಲ್ಲಿ ಚರ್ಚೆ ವೇಳೆ ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ನಡೆದಿರುವ 200 ಕೋಟಿ ರು. ಅಕ್ರಮವನ್ನು ಪ್ರಸ್ತಾಪಿಸಲು ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಮುಂದಾಗಿದ್ದಾರೆ. ಈ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಹೆಸರು ಪ್ರಸ್ತಾಪಿಸುವ ಸಾಧ್ಯತೆಗಳಿವೆ. ಅಲ್ಲದೆ ಅಕ್ರಮದ ಕುರಿತಂತೆ ಶಿವಲಿಂಗೇಗೌಡ ದಾಖಲೆಗಳನ್ನೂ ಒದಗಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.