ಸಾರಾಂಶ
ರಾಜ್ಯ ಕಾಂಗ್ರೆಸ್‌ನೊಳಗಿನ ಬಣ ರಾಜಕಾರಣದ ತಿಕ್ಕಾಟ ಬಗೆಹರಿಸಲು ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶುಕ್ರವಾರದಿಂದ ಎರಡು ದಿನಗಳ ಕಾಲ ಬೆಳಗಾವಿಗೆ ಆಗಮಿಸಲಿದ್ದಾರೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನೊಳಗಿನ ಬಣ ರಾಜಕಾರಣದ ತಿಕ್ಕಾಟ ಬಗೆಹರಿಸಲು ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶುಕ್ರವಾರದಿಂದ ಎರಡು ದಿನಗಳ ಕಾಲ ಬೆಳಗಾವಿಗೆ ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕೂಗು ಹುಟ್ಟುಹಾಕಿರುವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಗೆ ತೆರಳಲಿದ್ದು, ಸಂಧಾನ ಮಾತುಕತೆಯ ಮತ್ತೊಂದು ಸುತ್ತು ಬೆಳಗಾವಿಯಲ್ಲಿ ನಡೆಯುವ ಸಾಧ್ಯತೆಯಿದೆ.
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಪರಿಶೀಲನೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಶುಕ್ರವಾರ ಬೆಳಗಾವಿಗೆ ಆಗಮಿಸುತ್ತಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸಚಿವರ ಹೇಳಿಕೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷಕ್ಕೆ ಧಕ್ಕೆಯಾಗುವಂತೆ ಯಾವುದೇ ಹೇಳಿಕೆ ನೀಡದಂತೆ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶಾಸಕರಿಗೆ, ಸಚಿವರಿಗೆ ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದಾಗ ಸೂಚನೆ ನೀಡಿದ್ದರು. ಆದರೂ, ಸಭೆ ಮುಗಿದ ಮರುದಿನವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತಂತೆ ಸತೀಶ್ ಜಾರಕಿಹೊಳಿ ಸೇರಿ ಕೆಲ ಸಚಿವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಅದಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದರು.
ಜ.21ರ ಬೆಳಗಾವಿ ಸಮಾವೇಶದ ಸಿದ್ಧತೆ ಪರಿಶೀಲಿಸಲು ರಣದೀಪ್ ಸಿಂಗ್ ಸುರ್ಜೇವಾಲ ಶುಕ್ರವಾರ ಮತ್ತು ಶನಿವಾರ ಬೆಳಗಾವಿಯಲ್ಲಿ ತಂಗಲಿದ್ದಾರೆ. ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ ಸೇರಿ ಇನ್ನಿತರ ಸಚಿವರು, ನಾಯಕರು ಉಪಸ್ಥಿತರಿರಲಿದ್ದಾರೆ. ಈ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಎದುರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ನಡೆಯುತ್ತಿರುವ ಚರ್ಚೆ ಮತ್ತೆ ಪ್ರಸ್ತಾಪವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.