ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿರುವ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಿ. ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ಅವರು ನೀಡಿರುವ ರಾಜೀನಾಮೆ ಅಂಗೀಕರಿಸಿ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿರುವ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಿ. ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ಅವರು ನೀಡಿರುವ ರಾಜೀನಾಮೆ ಅಂಗೀಕರಿಸಿ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರಿಗೆ ವಿವರಣೆ
ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ರಾಹುಲ್ ಗಾಂಧಿ ಅವರಿಗೆ ವಿವರಣೆ ನೀಡಿದರು ಎನ್ನಲಾಗಿದೆ.
ಈ ಬಗ್ಗೆ ರಾಹುಲ್ ಗಾಂಧಿ ಅವರು ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ಮನವೊಲಿಕೆ ಮಾಡಲು ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಸೂಚನೆ
ಈ ವೇಳೆ ರಾಹುಲ್ ಗಾಂಧಿ ಅವರು, ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಕೆ ಮಾಡಲು ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದರು. ಒಂದೊಮ್ಮೆ ರಾಜೀನಾಮೆ ಹಿಂಪಡೆಯದಿದ್ದರೆ ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ. ಇಂತಹ ಬೆದರಿಕೆಗಳಿಗೆ ಒಮ್ಮೆ ಮಣಿದರೆ ಉಳಿದವರು ಸಹ ಇದೇ ಮಾರ್ಗ ಅನುಸರಿಸಬಹುದು ಎಂದು ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
