ಸಾರಾಂಶ
ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಚರ್ಚೆ ಮತ್ತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
ಕಲಬುರಗಿ : ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಮಂಗಳವಾರ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.
371ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ: ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ವಿಧಿ ಜಾರಿಗೆ ತರಲಾಗಿದೆ. ಇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಶ್ರಮಿಸಿದ್ದರು. 2013ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತು ಬಿಜೆಪಿಯಲ್ಲ. ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 370 ಜೆ ವಿಧಿ ಜಾರಿಗೆ ತರುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು ಎಂದರು.
ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರಲ್ಲಿ ಇರುವ ವ್ಯಾಪಕ ನಿರೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರು. ನೀಡಲಾಗಿದೆ ಎಂದು ಹೇಳಿದರು.