ಸಾರಾಂಶ
ಬೆಂಗಳೂರು : ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕೈಗಾರಿಕಾ ಯೋಜನೆಗಾಗಿ ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ರೈತರ ಉಗ್ರ ಹೋರಾಟಕ್ಕೆ ಮಣಿದ ಕೆಎಐಡಿಬಿಯು ಸರ್ಕಾರದ ಮುಂದಿನ ನಿರ್ದೇಶನ ಬರುವವರೆಗೆ ಭೂಸ್ವಾಧೀನ ಪ್ರಕ್ರಿಯೆ ಕಾರ್ಯ ಕೈಗೊಳ್ಳುವುದಿಲ್ಲವೆಂದು ಲಿಖಿತ ಹೇಳಿಕೆ ನೀಡಿದ ಹಿನ್ನೆಲೆ ರೈತರು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.
ಗುರುವಾರ ಬೆಳಗ್ಗೆ ಸಂಜಯನಗರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರ ನಿವಾಸದ ಎದುರು ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೈಗಾರಿಕೆಗಳಿಗೆ ಭೂಸ್ವಾಧೀನ ವಿರೋಧಿಸಿ ಚನ್ನರಾಯಪಟ್ಟಣ, ನಾಗದೇನಹಳ್ಳಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ತಲೆತಲಾಂತರಗಳಿಂದ ಬಾಳಿ ಬದುಕಿದ ಭೂಮಿಯನ್ನು ಕಳೆದುಕೊಳ್ಳುವುದು ಪ್ರತಿಯೊಬ್ಬರಿಗೂ ನೋವಿನ ಸಂಗತಿ. ಹಾಗಾಗಿ ಸರ್ಕಾರ ಕೂಡಲೇ ಅಧಿಸೂಚನೆ ಕೈಬಿಡಬೇಕು. ಇಲ್ಲದಿದ್ದರೆ ಹೋರಾಟ ನಿಲ್ಲಿಸುವುದಿಲ್ಲ ಪಟ್ಟು ಹಿಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ 1775.5 ಎಕರೆ, ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ವ್ಯಾಪ್ತಿಯಲ್ಲಿ 1031 ಎಕರೆ ಕೃಷಿ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಯನ್ನು ರೈತರು ವಿರೋಧಿಸುತ್ತಿದ್ದಾರೆ. ಆದರೂ ಸರ್ಕಾರ ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಕೆಐಎಡಿಬಿ ಕೈಗಾರಿಕೆಗೆ ಭೂಮಿ ಕೊಡಲು ಇಷ್ಟವಿಲ್ಲದ ರೈತರಿಗೂ ನೋಟಿಸ್ ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಿಂದ ಮನವಿ ಸ್ವೀಕರಿಸಿದ ಸಚಿವ ಕೆ.ಎಚ್.ಮುನಿಯಪ್ಪ, ಈ ಕುರಿತು ಮುಖ್ಯಮಂತ್ರಿ ಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ವರೆಗೂ ರೈತರಿಗೆ ಯಾವುದೇ ನೋಟಿಸ್ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.