ಸಾರಾಂಶ
ಕೆ.ಆರ್.ಪೇಟೆ : ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರುವ ಮುನ್ನವೇ ಇಡಿಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಪಟ್ಟಣದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಅದನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ಆರೋಪಿಸಿದರು.
ಡಿ.24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇಡಿಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ
ಜನರಿಗೆ ಅರ್ಥವಾಗುತ್ತದೆ ಎಂದು ಟೀಕಿಸಿದರು.
ಹೈಕಮಾಂಡ್ ಸೂಚನೆ ಕೊಟ್ಟಿಲ್ಲ:
ಮಂತ್ರಿಮಂಡಲ ಪುನಾರಚನೆ ಮಾಡುತ್ತೇನೆ ಎಂದು ನಾನೆಲ್ಲೂ ಹೇಳಿಲ್ಲ. ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದು ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಹಾಸನದಲ್ಲಿ ನಾಳೆ ಸಮಾವೇಶ ನಡೆಯುತ್ತಿದೆ. ಇದರಲ್ಲಿ ಭಿನ್ನರಾಗ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖಂಡರಾದ ಬಿ.ಎಲ್.ದೇವರಾಜು, ದಡದಪುರ ಶಿವಣ್ಣ, ಕೆ.ಬಿ. ಚಂದ್ರಶೇಖರ್ ಇತರರು ಇದ್ದರು.