ಸಾರಾಂಶ
ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ನಾಯಕತ್ವ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚಿಸಲಾಗಿದೆ.
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವ ಬಗ್ಗೆ ಅಸಮಾಧಾನ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಅತೃಪ್ತರು ಪದೇ ಪದೇ ಸಭೆ ಸೇರುತ್ತಿದ್ದು, ಇದೀಗ ಮತ್ತೊಮ್ಮೆ ಸಭೆ ನಡೆಸಿ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.
ಗುರುವಾರ ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸದಲ್ಲಿ ಅತೃಪ್ತರು ಸಭೆ ನಡೆಸಿದರು. ಸಭೆಯಲ್ಲಿ ಬಂಡಾಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್, ಅರವಿಂದ ಲಿಂಬಾವಳಿ, ಹೊಳಲ್ಕೆರೆ ಚಂದ್ರಪ್ಪ, ಜಿ.ಎಂ.ಸಿದ್ದೇಶ್ವರ್, ಪ್ರತಾಪ್‌ಸಿಂಹ, ಅಣ್ಣಾ ಸಾಹೇಬ್ ಜೊಲ್ಲೆ ಸೇರಿದಂತೆ ಇತರರು ಭಾಗಿಯಾಗಿದ್ದರು.
ಪಕ್ಷದಿಂದ ದೂರ ಇರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಈ ಸಂಬಂಧ ಹೈಕಮಾಂಡ್ ಬಳಿಕ ಈಶ್ವರಪ್ಪ ಪರ ವಕಾಲತ್ತು ವಹಿಸುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಅಲ್ಲದೇ, ಬಳ್ಳಾರಿ ಪಾದಯಾತ್ರೆ ಕುರಿತು ಸಹ ಚರ್ಚೆ ನಡೆಸಲಾಗಿದೆ.