ಸಾರಾಂಶ
ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ (ಮೈಸೂರು)
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆತರಲು ಬಿಜೆಪಿ ಯತ್ನಿಸುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೆಟ್ಟರ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ಸಿದ್ದರಾಮಯ್ಯ, ‘ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ ಎಂದು ಸ್ವತಃ ಶೆಟ್ಟರ್ ಅವರೇ ಹೇಳಿಕೊಂಡಿದ್ದಾರೆ.
ಆದರೆ ಬಿಜೆಪಿ ಪದೇ ಪದೆ ಉದ್ದೇಶಪೂರ್ವಕವಾಗಿಯೇ ಈ ರೀತಿಯ ಸುದ್ದಿ ಹಬ್ಬಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹೇಳಿಕೆಗೆ ಧ್ವನಿಗೂಡಿಸಿರುವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್‌ನಲ್ಲಿರುವ ಶೆಟ್ಟರ್‌ರನ್ನು ವಾಪಸ್ ಕರೆತರುವ ಪ್ರಯತ್ನಗಳು ನಡೆಯುತ್ತಿದೆ ಅಂದರೆ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದ್ದಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ಶೆಟ್ಟರ್ ಕಾಂಗ್ರೆಸ್ ಸೇರಿದ್ದರು. ಅವರನ್ನು ಇದೀಗ ವಾಪಸ್ ಬಿಜೆಪಿಗೆ ಸೇರಿಸಿಕೊಳ್ಳಲು ಯತ್ನಿಸುತ್ತಿದ್ದಾರೆಂದರೆ ಏನರ್ಥ?
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಯಾಕೆ ಅವರಲ್ಲಿ ನಾಯಕರು ಇಲ್ವಾ? ಒಳ್ಳೆಯ ಅಭ್ಯರ್ಥಿಗಳು ಇದ್ದರೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿಕೊಳ್ಳಿ ಎಂದು ಟಾಂಗ್ ನೀಡಿದರು.