ಐಟಿ ಸಿಬ್ಬಂದಿಗೆ ರಜೆ ನೀಡಿ, ಕಡ್ಡಾಯ ಮತದಾನ ಮಾಡಿಸಿ: ಜಿಲ್ಲಾ ಚುನಾವಣಾಧಿಕಾರಿ

| Published : Apr 17 2024, 02:00 AM IST

ಐಟಿ ಸಿಬ್ಬಂದಿಗೆ ರಜೆ ನೀಡಿ, ಕಡ್ಡಾಯ ಮತದಾನ ಮಾಡಿಸಿ: ಜಿಲ್ಲಾ ಚುನಾವಣಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.

ಐಟಿ-ಬಿಟಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಆಯೋಜಿಸಿದ್ದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಏ.26 ಹಾಗೂ ಮೇ 7 ರಂದು ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಲು ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಆ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಗಿದ್ದು, ಅದಕ್ಕೆ ಎಲ್ಲ ಸಂಸ್ಥೆಗಳು ಒಪ್ಪಿಕೊಂಡಿದ್ದಾರೆ. ಅಲ್ಲದೆ ಆಯಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತಪ್ಪದೆ ಮತ ಚಲಾಯಿಸಲು ಅರಿವು ಮೂಡಿಸುವ ಕೆಲಸ ಮಾಡಲು ತಿಳಿಸಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಹಬ್ ಇದ್ದು, ಲಕ್ಷಾಂತರ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗರದಲ್ಲಿ ಹೆಚ್ಚು ಐಟಿ-ಬಿಟಿ ಸಂಸ್ಥೆಗಳಿರುವ ಕಡೆ ಹಾಗೂ ಕಡಿಮೆ ಮತದಾನವಾಗಿರುವ ಸಂಸ್ಥೆಗಳಲ್ಲಿ ಹೆಚ್ಚಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲು ತಿಳಿಸಲಾಗಿದೆ ಎಂದರು.+++

ಐಟಿ-ಬಿಟಿ ಸಂಸ್ಥೆಗಳಲ್ಲಿ ಎಚ್.ಆರ್.ಎಂ.ಎಸ್ ವ್ಯವಸ್ಥೆಯಿದ್ದು, ಆ ಮೂಲಕ ಸಿಬ್ಬಂದಿಗಳಿಗೆ ತಪ್ಪದೆ ಮತದಾನ ಮಾಡಲು ಸಂದೇಶ ಕಳುಹಿಸುವ, ಎಲ್ಲ ಭಾಷೆಯನ್ನೊಳಗೊಂಡ ‘ಮೈ ಭಾರತ್ ಹೂ’ ಚುನಾವಣಾ ಗೀತೆ ಹಾಗೂ ಇನ್ನಿತರೆ ಜಾಗೃತಿ ಸಂದೇಶಗಳ ದೃಶ್ಯಾವಳಿಗಳನ್ನು ಎಲ್ಲ ಸಂಸ್ಥೆಗಳ ಎಲ್‌ಇಡಿ ಪರದೆಗಳಲ್ಲಿ ಹಾಕಲು ಸೂಚಿಸಲಾಗಿದೆ ಎಂದು ಹೇಳಿದರು. ಈ ಬಾರಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಹೆಚ್ಚು ಮತದಾನವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಮಾತನಾಡಿ,ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲ ಸಂಸ್ಥೆಗಳಿಗೂ ಮತದಾನದ ದಿನ ರಜೆ ನೀಡಿ ಎಲ್ಲರೂ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜತೆಗೆ ಎಲ್ಲಾ ಸಿಬ್ಬಂದಿಗಳಿಗೆ ಇ-ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ವಿವಿಧ ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು.