ಸಾರಾಂಶ
ಬೆಳಗಾವಿ : ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬಾಣಂತಿಯರು, ಶಿಶುಗಳು ಸಾವಿನಿಂದ ಸುದ್ದಿಯಲ್ಲಿರುವ ನಗರದ ಬಿಮ್ಸ್ ಆಸ್ಪತ್ರೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸತ್ಯಾಂಶ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಆಸ್ಪತ್ರೆಗೆ ಭೇಟಿ ನೀಡಿದ ವಿಷಯದಲ್ಲಿ ಯಾವುದೇ ರಾಜಕಾರಣ ಇಲ್ಲ. ಇಂದು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಈ ಸಾವುಗಳ ಕುರಿತು ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದ ವಿಜಯೇಂದ್ರ, ಈ ಬೇಜವಾಬ್ದಾರಿತನ ಏನಿದೆಯೋ ಅದನ್ನು ಸರ್ಕಾರ ಈಗಲಾದರೂ ಎಚ್ಚೆತ್ತು ಗಮನಿಸಬೇಕು ಎಂಬ ದೃಷ್ಟಿಯಿಂದ ಈ ಕುರಿತು ಸದನದಲ್ಲಿ ಗಮನ ಸೆಳೆಯುತ್ತೇವೆ ಎಂದು ಹೇಳಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ ಎಂದು ಆರೋಪಿಸಿದರು. ನಾಯಕರಾದ ಡಾ.ಅಶ್ವತ್ಥನಾರಾಯಣ್, ಶಶಿಕಲಾ ಜೊಲ್ಲೆ, ಹೇಮಲತಾ ನಾಯಕ್ ಅವರಿಗೆ ಸಾಥ್ ನೀಡಿದರು.
ಬಾಣಂತಿಯರು, ಹಸುಗೂಸುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ.
ಛಲವಾದಿ ನಾರಾಯಣಸ್ವಾಮಿ, ಪರಿಷತ್ ವಿಪಕ್ಷ ನಾಯಕ