ಕೈ ಟಿಕೆಟ್‌: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ

| Published : Mar 28 2024, 12:48 AM IST

ಸಾರಾಂಶ

ಮಾರ್ಚ್‌ ೨೫ ರಂದು ನಡೆದ ಕೆಪಿಸಿಸಿ ಸಭೆಯಲ್ಲಿ, ವ್ಯಕ್ತಿಗಿಂತ ಪಕ್ಷಕ್ಕೆ ಹೆಚ್ಚಿನ ಆಧ್ಯತೆ ನೀಡಲು ಒಮ್ಮತದಿಂದ ನಿರ್ಧಾರ ಕೈಗೊಂಡಿದ್ದು, ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಬಹುಮತದಿಂದ ಗೆಲ್ಲಿಸಬೇಕೆಂದು ಎಲ್ಲ ನಾಯಕರು ಸಂಕಲ್ಪ ಮಾಡಿದ್ದಾರೆ

ಕನ್ನಡಪ್ರಭ ವಾರ್ತೆ ಕೋಲಾರ

೨೦೨೪ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮೀನಾರಾಯಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದು ಹಲವು ದೃಶ್ಯ ಮಾಧ್ಯಮಗಳಲ್ಲಿ ಜಿಲ್ಲೆಯ ಹಲವು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ ಎಂದರು.

ಕಳೆದ ೨೫ ರಂದು ನಡೆದ ಕೆಪಿಸಿಸಿ ಸಭೆಯಲ್ಲಿ, ವ್ಯಕ್ತಿಗಿಂತ ಪಕ್ಷಕ್ಕೆ ಹೆಚ್ಚಿನ ಆಧ್ಯತೆ ನೀಡಲು ಒಮ್ಮತದಿಂದ ನಿರ್ಧಾರ ಕೈಗೊಂಡಿದ್ದು, ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಬಹುಮತದಿಂದ ಗೆಲ್ಲಿಸಬೇಕೆಂದು ಎಲ್ಲ ನಾಯಕರು ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.

ಚಿಕ್ಕ ಪೆದ್ದಣ್ಣಗೆ ಟಿಕೆಟ್‌ ಸಾಧ್ಯತೆ

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬುಧವಾರ ಸಂಜೆ ಅಥವಾ ಗುರುವಾರ ಬೆಳಗ್ಗೆ ಅಧಿಕೃತ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ, ಬಹುತೇಕ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣರಿಗೆ ಟಿಕೆಟ್‌ ನೀಡಲು ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಚಿಕ್ಕ ಪೆದ್ದಣ್ಣರಿಗೆ ಟಿಕೆಟ್ ಘೋಷಿಸುವ ಸಾಧ್ಯತೆ ಇದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮಾತನಾಡಿ, ಕೆಪಿಸಿಸಿ ವೀಕ್ಷರಾಗಿ ಹಾಗೂ ಉಸ್ತುವಾರಿಗಳಾಗಿ ಅಗಮಿಸಿದ್ದ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಂಪಂಗಿ ಸಮ್ಮುಖದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧರಾಗುವುದಾಗಿ ಸಚಿವರಾದ ಬೈರತಿ ಸುರೇಶ್, ಡಾ.ಎಂ.ಸಿ. ಸುಧಾಕರ್, ಕೆ.ಹೆಚ್. ಮುನಿಯಪ್ಪ. ಶಾಸಕರಾದ ಕೊತ್ತೂರು ಮಂಜುನಾಥ್ ಭರವಸೆ ನೀಡಿದ್ದರು ಎಂದು ನೆನಪಿಸಿದರು.

ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಜಯದೇವ, ಜಿಲ್ಲಾ ಕಾಂಗ್ರೇಸ್ ವಕ್ತಾರ ಎಲ್.ಎ. ಮಂಜುನಾಥ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಕೆ.ಯು.ಡಿ.ಎ ಮಾಜಿ ಅಧ್ಯಕ್ಷ ಅಥಾವುಲ್ಲಾ, ಅಲ್ಪಸಂಖ್ಯಾರ ಘಟಕದ ಅಧ್ಯಕ್ಷ ಎಕ್ಬಾಲ್ ಅಹಮದ್, ಇಂಟಕ್ ಅಧ್ಯಕ್ಷ ಯಲ್ಲಪ್ಪ, ಮಹಿಳಾ ಘಟಕದ ಮಂಗಳ, ಹಿಂದುಳಿದ ವರ್ಗಗಳ ಅಧ್ಯಕ್ಷ ನಾಗರಾಜ್, ಮುಖಂಡರಾದ ಸಜ್ಜಾದ್, ವಾಸೀಮ್, ಜಗನ್ ಇದ್ದರು.