ಚನ್ನಪಟ್ಟಣದಲ್ಲಿ ವಿಪಕ್ಷಗಳ ಮೇಲೆ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ : ಎಚ್‌ಡಿಕೆ ಆಕ್ರೋಶ

| Published : Oct 27 2024, 02:41 AM IST / Updated: Oct 27 2024, 04:23 AM IST

HD Kumaraswamy

ಸಾರಾಂಶ

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರತಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಬೆಂಗಳೂರು : ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರತಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಮತ್ತು ಎನ್‌ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಐತಿಹಾಸಿಕ ಸಭೆಯಾಗಿದ್ದು, ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಸರ್ಕಾರವು ದಬ್ಬಾಳಿಕೆ ನಡೆಸುತ್ತಿದೆ. ನಾಮಪತ್ರ ಸಲ್ಲಿಕೆಗೆ ಬಂದ ವಾಹನಗಳಿಗೆ ನೋಟಿಸ್‌ ನೀಡಿದೆ. ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌ನ ಹಲವರು ಚನ್ನಪಟ್ಟಣಕ್ಕೆ ಹೋಗಿದ್ದರು. ಅವರ ಸಭೆಗಳಿಗೆ ಬಂದ ವಾಹನಗಳಿಗೆ ವ್ಯವಸ್ಥೆ ಮಾಡಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಇವರು ಜನರ ಮುಂದೆ ಕಣ್ಣೀರು ಹಾಕಿಲ್ಲವೇ?:  ಮೂರೂ ಕ್ಷೇತ್ರ ಗೆದ್ದಾಗಿದೆ ಎಂಬುದಾಗಿ ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಕುಮಾರಸ್ವಾಮಿಯವರ ಭಾವನಾತ್ಮಕ ಮಾತು ಮತ್ತು ಕಣ್ಣೀರು ಜನರಿಗೆ ಬೇಸರವಾಗಿ ಹೋಗಿದೆ ಎಂದಿದ್ದಾರೆ. ಪಾಪ.. ಇವರು ಎಂದೂ ಜನರ ಮುಂದೆ ಕಣ್ಣೀರೇ ಹಾಕಿಲ್ಲವೇ? ಹೌದು, ನಾನು ಜನರ ಕಷ್ಟ ನೋಡಿ ಕಣ್ಣೀರು ಹಾಕುತ್ತಿದ್ದೇನೆ. ಇವರು ಅಧಿಕಾರ, ಹಣದ ದುರ್ಬಳಕೆಯಿಂದ ಗೆದ್ದಾಗಿದೆ ಎಂದು ಬೀಗುತ್ತಿದ್ದಾರೆ. ಇವರಿಗೆ ಚನ್ನಪಟ್ಟಣದಲ್ಲಿ ನಿಲ್ಲಿಸೋಕೆ ಕಾಂಗ್ರೆಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ಸಿಗಲಿಲ್ಲ. ಬಿಜೆಪಿಯಿಂದ ಅಭ್ಯರ್ಥಿ ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ. ಇಷ್ಟಾದರೂ ಕುತಂತ್ರ ಬೇರೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸರ್ಟಿಫಿಕೇಟ್‌ ಬೇಡ

ಕುಮಾರಸ್ವಾಮಿ ಮಂಡ್ಯಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಳೆದ ನಾಲ್ಕು ತಿಂಗಳ ನನ್ನ ಟಿಪಿ ನೋಡಿದ್ದಾರಾ ಅವರು? ನನ್ನ ಇಲಾಖೆಗೆ ಸಂಬಂಧಿಸಿ ಹಲವು ರಾಜ್ಯಗಳಿಗೆ ಹೋಗಿದ್ದೇನೆ. ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸಗಢ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿಗೆ ಹೋಗಿ ಬಂದಿದ್ದೇನೆ. ನಾನು ಎಷ್ಟು ರಾಜ್ಯಗಳಿಗೆ ಹೋಗಿದ್ದೀನಿ ಗೊತ್ತಿದೆಯಾ ಅವರಿಗೆ? ದೆಹಲಿಯಲ್ಲಿ ಸಮಯ ವ್ಯರ್ಥ ಮಾಡದೇ ಕೆಲಸ ಮಾಡುತ್ತಿದ್ದೇನೆ. ಇವರಿಂದ ನಾನು ಸರ್ಟಿಫಿಕೇಟ್ ತೆಗೆದುಕೊಳ್ಳುವ ಅಗತ್ಯ ಇಲ್ಲ. ಕರ್ನಾಟಕಕ್ಕೆ ಬರಲೇಬಾರದಾ ನಾನು? ನನ್ನನ್ನು ಗೆಲ್ಲಿಸಿದ ಜನರ ಕಷ್ಟ ಕೇಳಲು ಬರಲೇಬಾರದಾ? ನಾನು ಕರ್ನಾಟಕಕ್ಕೆ ಬಂದರೆ ಇವರು ನಿದ್ದೆಗೆಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.