ಇಂದು ಬಿಜೆಪಿ ಜತೆ ಎಚ್‌ಡಿಕೆ ಟಿಕೆಟ್‌ ಹಂಚಿಕೆ ಬಗ್ಗೆ ಸಭೆ - ಚನ್ನಪಟ್ಟಣ ಟಿಕೆಟ್‌ ನಿರ್ಧಾರ?

| Published : Oct 19 2024, 09:30 AM IST

HD Kumaraswamy

ಸಾರಾಂಶ

ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷಗಳು ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತೊಡಗಿಸಿಕೊಂಡಿದ್ದು, ಕಗ್ಗಂಟಾಗಿರುವ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಶನಿವಾರ ಉಭಯ ಪಕ್ಷಗಳ ಹಿರಿಯ ನಾಯಕರ ಮಹತ್ವದ ಸಭೆ ನಡೆಯಲಿದೆ.

ಬೆಂಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷಗಳು ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತೊಡಗಿಸಿಕೊಂಡಿದ್ದು, ಕಗ್ಗಂಟಾಗಿರುವ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಶನಿವಾರ ಉಭಯ ಪಕ್ಷಗಳ ಹಿರಿಯ ನಾಯಕರ ಮಹತ್ವದ ಸಭೆ ನಡೆಯಲಿದೆ.

ಸಭೆಯಲ್ಲಿ ಜೆಡಿಎಸ್‌ ವತಿಯಿಂದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ಕಡೆಯಿಂದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ, ಮಾಜಿ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಹಾಗೂ ಸಂಬಂಧಿಸಿದ ಇತರರು ಪಾಲ್ಗೊಳ್ಳಲಿದ್ದಾರೆ.

ಬಹುತೇಕ ಶನಿವಾರದ ಹೊತ್ತಿಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆಯಿದ್ದರೂ, ಬಿಜೆಪಿ ವರಿಷ್ಠರಿಂದ ಅಂತಿಮ ಮುದ್ರೆ ಬೀಳುವವರೆಗೆ ಕಾಯಬೇಕಾಗಿ ಬರಬಹುದು.

ಚನ್ನಪಟ್ಟಣ ಕ್ಷೇತ್ರವು ಜೆಡಿಎಸ್‌ನ ಭದ್ರಕೋಟೆಯಾಗಿರುವುದರಿಂದ ತಮ್ಮದೇ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒಲವು ಹೊಂದಿದ್ದಾರೆ. ಆದರೆ, ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಲು ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವು ಜಟಿಲಗೊಂಡಿದೆ. ಈ ಸಂಬಂಧ ಶನಿವಾರ ಬಿಜೆಪಿ ಮುಖಂಡರ ಜತೆ ಸಮಾಲೋಚನೆ ನಡೆಸಿ ಅಭ್ಯರ್ಥಿ ಆಯ್ಕೆಯ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಸೋಲು ಗೆಲುವನ್ನು ಆಧರಿಸಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿರ್ಣಯವನ್ನು ದೆಹಲಿಯ ಬಿಜೆಪಿ ವರಿಷ್ಠರು ಕುಮಾರಸ್ವಾಮಿ ಅವರಿಗೆ ಬಿಟ್ಟಿದ್ದಾರೆ. ರಾಜ್ಯದ ಬಿಜೆಪಿಯ ಮುಖಂಡರು ಯೋಗೇಶ್ವರ್‌ ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಭವಿಷ್ಯದ ದೃಷ್ಟಿಯಲ್ಲಿಟ್ಟುಕೊಂಡು ಕುಮಾರಸ್ವಾಮಿ ಕ್ಷೇತ್ರದ ಬಗ್ಗೆ ಚಿಂತನೆ ನಡೆಸಿರುವುದರಿಂದ ಜೆಡಿಎಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಗ್ಗ-ಜಗ್ಗಾಟಕ್ಕೆ ಶನಿವಾರ ನಡೆಯುವ ಸಭೆಯಲ್ಲಿ ಪರಿಹಾರ ಸಿಗುವ ನಿರೀಕ್ಷೆ ಇದೆಯಾದರೂ ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆಗೂ ಯೋಗೇಶ್ವರ್‌ ಮತ್ತು ಕುಮಾರಸ್ವಾಮಿ ಯಾವ ಹೆಜ್ಜೆ ಇಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.