ಸಾರಾಂಶ
ಹುಬ್ಬಳ್ಳಿ : ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷದಿಂದ ಶೀಘ್ರ ಉಚ್ಚಾಟಿಸುವ ಮಾಹಿತಿಯಿದೆ ಎಂದು ವಿಧಾನಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ನಮ್ಮ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಜತೆಗೆ ಈಚೆಗೆ ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ಅನ್ನು ಸಹ ಸ್ವಾಗತಿಸಿದ್ದಾರೆ. ಅವರು ಯಾವಾಗ ನಮ್ಮ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಾರೆ ಎಂದು ನೋಡಬೇಕಿದೆ. ಇನ್ನು ಕೆಲವು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಸೂಕ್ತ ಸಮಯದಲ್ಲಿ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ರಾಜ್ಯ ಸಂಪುಟ ವಿಸ್ತರಣೆ ಮೇ ತಿಂಗಳಲ್ಲಿ ಆಗುವ ಸಾಧ್ಯತೆಯಿದೆ. ಹಿಂದೆ ಸಚಿವ ಸಂಪುಟದಲ್ಲಿಯೇ ನನಗೆ ಸಚಿವ ಸ್ಥಾನ ಸಿಗಬೇಕಿತ್ತು. ಈ ಬಾರಿ ಸಿಗುವ ವಿಶ್ವಾಸವಿದೆ. ವಕ್ಫ್ ಅಧ್ಯಕ್ಷರ ಆಯ್ಕೆಯಲ್ಲಿ ಸಚಿವ ಜಮೀರ್ ಅಹಮದ್ ಅಸಮಾಧಾನಗೊಂಡಿದ್ದಾರೆ ಎಂದು ನನಗೆ ಅನ್ನಿಸುತ್ತಿಲ್ಲ. ಪವರ್ ಶೇರಿಂಗ್ ವಿಚಾರ ಕೂಡ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.