ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿದ್ದಾರೆಂದು ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ 2022ರಲ್ಲಿ ನಡೆಸಿದ ಪ್ರತಿಭಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಐವರು ನಾಯಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಇದೇ ವೇಳೆ ದೂರು ದಾಖಲಿಸಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲ ಅರ್ಜಿದಾರರಿಗೆ 10 ಸಾವಿರ ರು. ದಂಡ ವಿಧಿಸಿದೆ. ದಂಡದ ಮೊತ್ತವನ್ನು ಎರಡು ವಾರದಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಜಮೆ ಮಾಡಬೇಕು ಎಂದು ಮಂಗಳವಾರ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ ನಿರ್ದೇಶಿಸಿದೆ. ಮಾ.26ರಂದು ವಿಶೇಷ ನ್ಯಾಯಾಲಯದ ಮುಂದೆ ಸಿದ್ದರಾಮಯ್ಯ ಖುದ್ದು ಹಾಜರಿಗೆ ಸೂಚಿಸಿದೆ.
ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿದಾರರ ಪರ ವಕೀಲರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ. ಪ್ರಕರಣ ಸಂಬಂಧ ಆರೋಪಗಳನ್ನು ಕೈಬಿಡಲು/ಆರೋಪದಿಂದ ಮುಕ್ತಗೊಳಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಆದೇಶಿಸಿತು.
2022ರ ಏ.14ರಂದು ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ವಿಶೇಷ ನ್ಯಾಯಾಲಯ ಜಾರಿ ಮಾಡಿದ್ದ ಜಾಮೀನು ರಹಿತ ವಾರೆಂಟ್ ಮತ್ತು ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಮೇಲ್ಮನೆ ಸದಸ್ಯ ಸಲೀಂ ಅಹ್ಮದ್ ಹಾಗೂ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೈಕೋರ್ಟ್‌ಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ತಿರಸ್ಕರಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ಮಾ.26ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ವಿಚಾರಣೆಗೆ ಹಾಜರಾಗಬೇಕು.ಮಾ.7ರಂದು ರಣದೀಪ್ ಸಿಂಗ್ ಸುರ್ಜೇವಾಲಾ, ಮಾ.11ರಂದು ಸಚಿವ ಎಂ.ಬಿ. ಪಾಟೀಲ್ ಹಾಗೂ ಸಲೀಂ ಅಹ್ಮದ್, ಮಾ.15ರಂದು ಸಚಿವ ರಾಮಲಿಂಗಾರೆಡ್ಡಿ ವಿಶೇಷ ನ್ಯಾಯಾಲಯದ ಎದುರು ಖುದ್ದು ಹಾಜರಾಗಬೇಕು.
ಅಧಿವೇಶನ ಸೇರಿದಂತೆ ವಿಶೇಷ ಕಾರಣಗಳಿಗಾಗಿ ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೋರಿ ಅರ್ಜಿದಾರರು ಅರ್ಜಿ ಸಲ್ಲಿಸಿದರೆ, ದಿನಾಂಕ ಮಾರ್ಪಾಡು ಮಾಡುವ ಅಧಿಕಾರವನ್ನು ವಿಶೇಷ ನ್ಯಾಯಾಲಯದ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿಸಿತು.
ಜನಪ್ರತಿನಿಧಿಗಳು ಮೊದಲು ಕಾನೂನು ಪಾಲಿಸಬೇಕು: ಕೋರ್ಟ್
ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಸಿದ್ದರಾಮಯ್ಯ ಪರ ವಕೀಲರು ಮಾಡಿದ ಮನವಿ ತಿರಸ್ಕರಿಸಿದ ನಂತರ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಜನಪ್ರತಿನಿಧಿಗಳಾದವರು ಮೊದಲು ಕಾನೂನು ಪಾಲಿಸಬೇಕು. ಆಗಷ್ಟೇ ಮತದಾರರು ಕಾನೂನು ಪಾಲಿಸುತ್ತಾರೆ.
ಪ್ರಧಾನ ಮಂತ್ರಿ ಮತ್ತು ಪೋಸ್ಟ್ ಮ್ಯಾನ್ ಕ್ರಿಮಿನಲ್ ಕಾನೂನಿನಲ್ಲಿ ಸಮಾನವಾಗಿ ನಿಲ್ಲುತ್ತಾರೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ನುಡಿದರು.
ಬಿಎಸ್‌ವೈ, ವಿಜಯೇಂದ್ರ ವಿರುದ್ಧ ತಪ್ಪು ಮಾಹಿತಿ: ಡಿಕೆಶಿ ಮೇಲೆ ಎಫ್‌ಐಆರ್‌ಬೆಂಗಳೂರು: ಬಿ.ವೈ.ವಿಜಯೇಂದ್ರ, ಬಿ.ಎಸ್.ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹಂಚಿಕೊಂಡಿದ್ದ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ವಿಶೇಷ ನ್ಯಾಯಾಲಯ ಸೂಚಿಸಿದೆ.