ಸಂವಿಧಾನ ಬದಲಾವಣೆ ಬಗ್ಗೆ ನಾನು ಹೇಳಿಕೆ ನೀಡಿಲ್ಲ - ನನ್ನ ಹೇಳಿಕೆ ತಿರುಚಿ ಬಿಜೆಪಿಯಿಂದ ಅಪಪ್ರಚಾರ : ಡಿಕೆಶಿ

| N/A | Published : Mar 25 2025, 07:30 AM IST

dk shivakumar
ಸಂವಿಧಾನ ಬದಲಾವಣೆ ಬಗ್ಗೆ ನಾನು ಹೇಳಿಕೆ ನೀಡಿಲ್ಲ - ನನ್ನ ಹೇಳಿಕೆ ತಿರುಚಿ ಬಿಜೆಪಿಯಿಂದ ಅಪಪ್ರಚಾರ : ಡಿಕೆಶಿ
Share this Article
  • FB
  • TW
  • Linkdin
  • Email

ಸಾರಾಂಶ

ಸಂವಿಧಾನ ಬದಲಾವಣೆ ಕುರಿತು ನಾನು ಎಲ್ಲೂ ಹೇಳಿಲ್ಲ. ಬಿಜೆಪಿ ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದು, ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಬೆಂಗಳೂರು : ಸಂವಿಧಾನ ಬದಲಾವಣೆ ಕುರಿತು ನಾನು ಎಲ್ಲೂ ಹೇಳಿಲ್ಲ. ಬಿಜೆಪಿ ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದು, ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.  

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ - ಸಂವಿಧಾನ ಕುರಿತು ತಾವು ನೀಡಿದ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ದೃಶ್ಯ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚಿದೆ. 

36 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂಥ ವಿಚಾರದಲ್ಲಿ ನಾನು ಬಿಜೆಪಿಯ ಜೆ.ಪಿ.ನಡ್ಡಾ ಅವರಿಗಿಂತಲೂ ಸೂಕ್ಷ್ಮ ರಾಜಕಾರಣಿ. ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರು ಎಳೆದು ತರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಲಯಗಳ ತೀರ್ಪಿನ ಅನುಸಾರ ಸಂವಿಧಾನಕ್ಕೆ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆ. ಅದರ ಹೊರತು, ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ. ನನ್ನ ಹೇಳಿಕೆ ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಸಂವಿಧಾನವನ್ನು ಜಾರಿಗೆ ತಂದಿದ್ದೇ ಕಾಂಗ್ರೆಸ್‌ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೇ ಚೆನ್ನಾಗಿ ತಿಳಿದಿದೆ. ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಏನೂ ಇಲ್ಲದ ಕಾರಣಕ್ಕಾಗಿ, ನಮ್ಮ ವಿರುದ್ಧ ಇಲ್ಲಸಲ್ಲದ ಪ್ರಸ್ತಾಪ ಮಾಡುತ್ತಿದೆ. 

ಇದು ನನ್ನ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಮುಂದುವರಿದ ರಾಜಕೀಯ ಪಿತೂರಿ ಎಂದು ಹೇಳಿದರು. ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ಯಾವ ಆಧಾರದಲ್ಲಿ ನೀಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್‌, ರಾಜ್ಯದ ಹಿಂದುಳಿದ ವರ್ಗಗಳ ವರದಿ ಆಧಾರದ ಮೇಲೆ ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಮಹಾರಾಷ್ಟ್ರ, ಹರಿಯಾಣ ಸೇರಿ ಅನೇಕ ರಾಜ್ಯಗಳಲ್ಲಿ ಮೀಸಲಾತಿ ವಿಚಾರವಾಗಿ ನ್ಯಾಯಲಯಗಳ ಮೆಟ್ಟಿಲೇರಲಾಗಿದ್ದು, ಆ ನ್ಯಾಯಾಲಯಗಳ ತೀರ್ಪುಗಳ ಆಧಾರದ ಮೇಲೆ ಕೆಲ ಬದಲಾವಣೆ ಮಾಡಿ ಅವಕಾಶ ನೀಡಲಾಗಿದೆ ಎಂದರು.