ಯಾವುದೇ ಕ್ಷಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ನಗರದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿರುಸಿನಿಂದ ಪಕ್ಷ ಸಂಘಟನೆ ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಬೆಂಗಳೂರು : ಯಾವುದೇ ಕ್ಷಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ನಗರದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿರುಸಿನಿಂದ ಪಕ್ಷ ಸಂಘಟನೆ ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಸೋಮವಾರ ನಡೆದ ಜಿಬಿಎ ವ್ಯಾಪ್ತಿಯ ಸೇರಿದ ಐದು ನಗರ ಪಾಲಿಕೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಟಿಕೆಟ್ ಆಕಾಂಕ್ಷಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು ಜಿಬಿಎ ಚುಣಾವಣೆ ಮತ್ತಷ್ಟು ಮುಂದಕ್ಕೆ ಹಾಕಲು ಸಾಧ್ಯವಿಲ್ಲ. ಯಾವಾಗ ಬೇಕಾದರೂ ಚುನಾವಣಾ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಿದರು.
ವಾರ್ಡ್ ಮಟ್ಟದಲ್ಲಿ ಪಕ್ಷ ಸಂಘಟನೆ ಒತ್ತು:
ಕೇವಲ ಟಿಕೆಟ್ ಬೇಕು ಎಂದು ಆಸೆ ಇಟ್ಟುಕೊಂಡಿದ್ದರೆ ಸಾಲದು. ನೀವು ಸ್ಪರ್ಧಿಸುವ ವಾರ್ಡ್‌ನಲ್ಲಿ ಪಕ್ಷದ ಸಂಘಟನೆ ಹೇಗಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಪಕ್ಷದ ವಿಚಾರಗಳು ಯೋಜನೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಮಾಹಿತಿಯು ಮನೆಮನೆಗೂ ತಲುಪಬೇಕು. ವಾರ್ಡ್ ವಿಭಾಗದಲ್ಲಿ ಶ್ರಮಪಟ್ಟು ಕೆಲಸ ಮಾಡಿ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ತಿಳಿಸಿದರು.
ಮಹಿಳೆಯರಿಗೆ ಹೆಚ್ಚಿನ ಅವಕಾಶ:
ಮಹಿಳೆಯರಿಗೆ ಹೆಚ್ಚು ಅವಕಾಶ ನೀಡುವ ಉದ್ದೇಶವಿದೆ. ಆಡಳಿತ ಸಭೆಗಳಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚು ಇರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಉದ್ದೇಶ. ಈ ಹಿನ್ನಲೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚು ಉತ್ತೇಜಿನ ನೀಡುವುದು ಪಕ್ಷದ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು.
ಎಸ್ಐಆರ್ ಮೇಲೆ ನಿಗಾವಹಿಸಿ:
ಬೆಂಗಳೂರಿನಲ್ಲಿ ಎಸ್ಐಆರ್ ಪ್ರಕ್ರಿಯೆ ಶುರುವಾಗಿದೆ. ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷವು ತನ್ನ ಸರ್ಕಾರದ ಬಲವನ್ನು ದುರುಪಯೋಗ ಮಾಡಿಕೊಂಡು ಈ ಪ್ರಕ್ರಿಯೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಗಳು ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ಗಂಭೀರವಾಗಿ ತೊಡಗಿಕೊಳ್ಳಬೇಕು. ಅಕ್ರಮ ಮತಗಳು ಉಳಿದುಕೊಳ್ಳದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಪಕ್ಷದ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಸಂಸದ ಎಂ.ಮಲ್ಲೇಶ್ ಬಾಬು, ಗ್ರೇಟರ್ ಬೆಂಗಳೂರು ಪಾಲಿಕೆ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಟಿ.ಎನ್.ಜವರಾಯಿಗೌಡ, ಮಾಜಿ ಶಾಸಕ ತಿಪ್ಪೇಸ್ವಾಮಿ, ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಈ ಬಾರಿ ಬೆಂಗಳೂರಿನ ಆಡಳಿತವು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್‌ಡಿಎ ಮೈತ್ರಿಕೂಟದ ತೆಕ್ಕೆಗೆ ಬರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ ಮೈತ್ರಿ ಪಕ್ಷದ ಜೊತೆಯಾಗಿ ನಾವು ಕೆಲಸ ಮಾಡಬೇಕು. ಪರಸ್ಪರ ಶಕ್ತಿ ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಎದುರಿಸಬೇಕು.
- ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ
