ಐಪಿಎಸ್‌ ಚಂದ್ರಶೇಖರ್‌ ಕ್ರಿಮಿನಲ್‌: ಎಚ್‌ಡಿಕೆ ವಾಗ್ದಾಳಿ - ಬ್ಲ್ಯಾಕ್‌ಮೇಲರ್‌, ಸರಣಿ ಅಪರಾಧ ಕೃತ್ಯಗಳ ಆರೋಪಿ

| Published : Sep 30 2024, 11:31 AM IST

HD Kumaraswamy
ಐಪಿಎಸ್‌ ಚಂದ್ರಶೇಖರ್‌ ಕ್ರಿಮಿನಲ್‌: ಎಚ್‌ಡಿಕೆ ವಾಗ್ದಾಳಿ - ಬ್ಲ್ಯಾಕ್‌ಮೇಲರ್‌, ಸರಣಿ ಅಪರಾಧ ಕೃತ್ಯಗಳ ಆರೋಪಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಒಬ್ಬ ಬ್ಲ್ಯಾಕ್‌ಮೇಲರ್‌, ಕ್ರಿಮಿನಲ್‌ ಎಂದು ಹರಿಹಾಯ್ದಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಆ ವ್ಯಕ್ತಿ ಬಗ್ಗೆ ನಾನು ಹೇಳಿದ್ದು ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಒಬ್ಬ ಬ್ಲ್ಯಾಕ್‌ಮೇಲರ್‌, ಕ್ರಿಮಿನಲ್‌ ಎಂದು ಹರಿಹಾಯ್ದಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಆ ವ್ಯಕ್ತಿ ಬಗ್ಗೆ ನಾನು ಹೇಳಿದ್ದು ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಎಡಿಜಿಪಿ ಚಂದ್ರಶೇಖರ್ ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರಿಸಲಿ ಎಂದೂ ಅವರು ಆಗ್ರಹಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ (ಚಂದ್ರಶೇಖರ್‌) ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದರು.

ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು.

ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು, ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಸಚಿವರು ಹೇಳಿದರು.

ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಮಾಧ್ಯಮಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದ ಎನ್ನುವುದು ಗೊತ್ತಿದೆ. ಅವರ ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ರೆಡಿ ಮಾಡಿಕೊಟ್ಟರು, ಅವರೊಂದಿಗೆ ಇನ್ನೊಬ್ಬರು ಯಾರಿದ್ದರು ಎನ್ನುವುದು ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೀನಾ? ಅವರ ಕೈಕೆಳಗೆ ಕೆಲಸ ಮಾಡುವ ಇನ್‌ಸ್ಪೆಕ್ಟರ್‌ಗೆ 20 ಕೋಟಿ ರು. ಡಿಮ್ಯಾಂಡ್ ಇಟ್ಟು ಸಿಕ್ಕಿಬಿದ್ದಿದ್ದಾನೆ. ಆ ಇನ್‌ಸ್ಪೆಕ್ಟರ್ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ ಎರಡು ಕೋಟಿ ರು. ತಂದು ಕೊಡಬೇಕು ಎಂದು ಬ್ಲಾಕ್ ಮೇಲ್ ಮಾಡಿದ್ದು ಈತನೇ ಅಲ್ಲವೇ? ಎಫ್‌ಐಆರ್‌ ಹಾಕಿದ ನಂತರ ಕೇಸ್, ಕೋರ್ಟ್ ಮುಂದೆ ಇದೆಯಲ್ಲ. ಇದೇನಾ ಆತನ ಸತ್ಯಮೇವ ಜಯತೆ ಎಂದು ಕಿಡಿಕಾರಿದರು.