ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡಬೇಕೆಂದು ಪಣ ತೊಟ್ಟಿರುವ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಪ್ರಸಕ್ತ 2025-2026ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

ಗ್ರೇಡಿಂಗ್‌ ವ್ಯವಸ್ಥೆ ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿ

ಗ್ರೇಡಿಂಗ್‌ ವ್ಯವಸ್ಥೆ ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್‌ ಸೇರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್‌. ಇಂದಿರೇಶ್‌ ಅವರ ಏಕ ಸದಸ್ಯ ಪೀಠವು ಸರ್ಕಾರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ. ಈ ಕುರಿತು ಅರ್ಜಿದಾರರ ಪರ ವಕೀಲ ಆರ್‌.ವಿ. ನಾಯ್ಕ್‌ ಅವರು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

2025-2026ನೇ ಸಾಲಿನಿಂದಲೇ ಗ್ರೇಡ್‌ ನೀಡುವುದಾಗಿ ಹೇಳಿಕೆ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಆರ್‌.ವಿ. ನಾಯ್ಕ್‌ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು 2026ರ ಮಾ.28ರಂದು ಹೇಳಿಕೆ ನೀಡಿದ್ದಾರೆ ಎಂದು ವಿವರಿಸಿದರು.


ಅಲ್ಲದೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(ಕೆಎಸ್‌ಇಎಬಿ) ಮುಖ್ಯಸ್ಥರು 2024ರ ಅ.18 ಮತ್ತು 2025ರ ಅ.28ರಂದು ಮಾರ್ಗಸೂಚಿ ಹಾಗೂ ಸುತ್ತೋಲೆ ಹೊರಡಿಸಿ, ಎಸ್‌ಎಸ್‌ಎಲ್‌ಸಿ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕ ನೀಡಬೇಕು. ಲಿಖಿತ ಪರೀಕ್ಷೆಯ ಮೌಲ್ಯಮಾಪನದಲ್ಲಿ 80 ಅಂಕ, ಶಾಲಾ ಆಂತರಿಕ ಪರೀಕ್ಷೆ 20 ಅಂಕ ನೀಡಬೇಕು ಎಂದು ಸೂಚಿಸಿದ್ದಾರೆ. ಆದರೆ, ಕೊನೆ ಹಂತದಲ್ಲಿ ಅಂದರೆ ಎಸ್‌ಎಸ್‌ಎಲ್‌ ಪರೀಕ್ಷೆ ನಡೆಯುತ್ತಿರುವ ಸಮಯದಲ್ಲಿ ಅಂಕಗಳ ಬದಲಿಗೆ ಗ್ರೇಡ್‌ ನೀಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಆಕ್ಷೇಪಿಸಿದರು.

ಹಾಗೆಯೇ, ಯುಪಿಎಸ್‌ಸಿ ಸೇರಿದಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸ್ವಾಮ್ಯದ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಗ್ರೇಡಿಂಗ್ ಅನ್ನು ಪರಿಗಣಿಸುವುದಿಲ್ಲ. ಕೇವಲ ಅಂಕಗಳನ್ನಷ್ಟೆ ಪರಿಗಣಿಸಲಾಗುತ್ತದೆ. ರಾಜ್ಯ ಸರ್ಕಾರ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಂಡಿಗ್‌ ನೀಡಿದರೆ, ರಾಜ್ಯದ ವಿದ್ಯಾರ್ಥಿಗಳು/ಉದ್ಯೋಗ ಆಕಾಂಕ್ಷಿಗಳ ಮೇಲೆ ಭವಿಷ್ಯದಲ್ಲಿ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ 2025-2026ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನೇ ನೀಡಲು ಸರ್ಕಾರ ಹಾಗೂ ಕೆಎಸ್‌ಇಎಬಿಗೆ ನಿರ್ದೇಶಿಸಬೇಕು ಎಂದು ಕೋರಿದರು.

ಆಗ ನ್ಯಾಯಪೀಠ ಪ್ರತಿಕ್ರಿಯಿಸಿ, ತೃತೀಯ ಭಾಷೆ ವಿಷಯಗಳ ಪರೀಕ್ಷೆಯಲ್ಲಿ ಗ್ರೇಡಿಂಗ್‌ ನೀಡುವ ಬಗ್ಗೆ ರಾಜ್ಯ ಸರ್ಕಾರ ನೋಟಿಫಿಕೇಷನ್‌/ಸುತ್ತೋಲೆ ಹೊರಡಿಸಿದೆಯೇ ಎಂದು ಸರ್ಕಾರಿ ವಕೀಲರನ್ನು ಕೋರಿದರು.

ಸರ್ಕಾರಿ ವಕೀಲರು, ಸದ್ಯ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸರ್ಕಾರದಿಂದ ಪಡೆದು ತಿಳಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಹಾಲಿ ಇರುವ ನಿಯಮಗಳು ಹಾಗೂ ಮಾರ್ಗಸೂಚಿಯಂತೆ 2025-2026ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವ ಕುರಿತು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ನೀಡಿದ್ದ ಹೇಳಿಕೆ ಆಕ್ಷೇಪಿಸಿ ಬೆಂಗಳೂರಿನ ಎಚ್‌.ಎನ್‌.ಚಂದನಾ ಮತ್ತು ಎಸ್.ವೆಂಕಟೇಶ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ಏ.10ರಂದು ವಜಾಗೊಳಿಸಿತ್ತು. ಜೊತೆಗೆ ಅರ್ಜಿದಾರರಿಗೆ ಒಂದು ಲಕ್ಷ ರು. ದಂಡ ವಿಧಿಸಿದ್ದನ್ನು ಸ್ಮರಿಸಬಹುದು.

ಇತ್ತೀಚೆಗೆ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕ ರದ್ದುಪಡಿಸಿದ್ದ ಸರ್ಕಾರ

ಇದರ ಬದಲು ಗ್ರೇಡ್‌ ಪದ್ಧತಿ ಜಾರಿ. ಇದಕ್ಕೆ ಪರ-ವಿರೋಧ ವ್ಯಕ್ತವಾಗಿತ್ತು

ಇದೀಗ ಹೈಕೋರ್ಟ್‌ನಿಂದ ಗ್ರೇಡ್‌ ಬದಲಿಗೆ ಅಂಕ ನೀಡುವಂತೆ ಆದೇಶ

ಅಂಕದ ಬದಲು ಗ್ರೇಡ್‌ ನೀಡಬೇಕೆಂದು ಪಣ ತೊಟ್ಟಿದ್ದ ಸರ್ಕಾರಕ್ಕೆ ಹಿನ್ನಡೆ