ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

| Published : Sep 11 2024, 01:08 AM IST / Updated: Sep 11 2024, 04:40 AM IST

HD Kumaraswamy

ಸಾರಾಂಶ

ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

 ನವದೆಹಲಿ :  ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ರಾಜ್ಯ ಭಾರೀ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರು ದೆಹಲಿಯಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ, ರಾಜ್ಯದ ವಿವಿಧ ಕೈಗಾರಿಕಾ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಂಪೂರ್ಣ ಸಹಕಾರದ ಭರವಸೆ ನೀಡಿದರು.

ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಹೆಚ್ಚು, ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಮಾತುಕತೆ ವೇಳೆ ಎಚ್‌ಎಂಟಿ ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಪ್ರಸ್ತಾಪವಾಯಿತು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದರು.