‘ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿದ್ದು, ನನ್ನನ್ನು ಪಾರ್ಟಿ ಮಾಡಿದ್ದಾರೆ. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಫೀಸ್‌‍ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ’ ಎಂದು ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು : ‘ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿದ್ದು, ನನ್ನನ್ನು ಪಾರ್ಟಿ ಮಾಡಿದ್ದಾರೆ. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಫೀಸ್‌‍ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮಾರ್ಮಿಕವಾಗಿ ಹೇಳಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೆಲವು ರೈತರು ಹಾಗೂ ನನ್ನನ್ನು ಪಾರ್ಟಿಯನ್ನಾಗಿ ಮಾಡಿದೆ. ಹಿರಿಯ ವಕೀಲ ಉದಯಹೊಳ್ಳ ಅವರು ಈ ಹಿಂದೆ ಪತ್ರ ಬರೆದು ನೀವು ಮಾತನಾಡಬಾರದು ಎಂದಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯೋಜನೆ ವಿಚಾರದಲ್ಲಿ ರೈತರಿಗೆ ಆಗಿರುವ ಅನ್ಯಾಯ ಹಾಗೂ ಅಕ್ರಮಗಳ ಕುರಿತು ಪತ್ರ ಬರೆದಿದ್ದು, ಅವರು ಪ್ರತಿಯಾಗಿ ಹಿಂಬರಹ ನೀಡಿದ್ದಾರೆ. ಈ ರಿಟ್‌ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಏನು ಮಾಡುತ್ತದೋ ಗೊತ್ತಿಲ್ಲ ಎಂದರು.

ಸಿದ್ದರಾಮಯ್ಯನವರು ಹಣಕಾಸು ಸಚಿವರಾಗಿದ್ದರು

ನಾನು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಎಂಓಯು ಮಾಡಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಈ ಯೋಜನೆ ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‌ಶಿಪ್‌, ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ನೈಸ್‌‍ ಕಂಪನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರು. ಕೊಡುತ್ತಿದ್ದಾರಂತೆ. ರಾಜ್ಯ ಸರ್ಕಾರದ ಅಡ್ವೊಕೇಟ್‌ ಜನರಲ್‌, ಕಾನೂನು ಸಲಹೆಗಾರರು ಇದ್ದರೂ ಇನ್ನೊಬ್ಬರನ್ನು ನೈಸ್‌‍ ಕಂಪನಿಗೆ ಸಂಬಂಧಿಸಿ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಬಡವರ ಬಗ್ಗೆ ಸಿಎಂಗೆ ಎಲ್ಲಿಲ್ಲದ ಅನುಕಂಪ:

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೌಡರು, ನನಗೆ ಇನ್ನೂ ಹೋರಾಟದ ಕೆಚ್ಚಿದೆ. ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಖಾಲಿ ಉಳಿದಿವೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದರು.

ಬಡವರ ಬಗ್ಗೆ ಎಲ್ಲಿಲ್ಲದ ಅನುಕಂಪ ಮುಖ್ಯಮಂತ್ರಿಗಿದೆ. ಮುಖ್ಯಮಂತ್ರಿ ಕಚೇರಿಯಲ್ಲೇ ಏಳೆಂಟು ಮಂದಿ ಕ್ಯಾಬಿನೆಟ್‌ ದರ್ಜೆಯವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಇವರ ಆಡಳಿತದ ವೈಖರಿ ಎಂದು ಚಾಟಿ ಬೀಸಿದರು.