ಸಿದ್ದರಾಮಯ್ಯ ಮನೆಗೆ ತೊಲಗಲಿ: ವಿಜಯೇಂದ್ರ ಆಕ್ರೋಶ- ಅವರು ಸಮಾಜವಾದಿ ಅಲ್ಲ ಮಜಾವಾದಿ

| Published : Aug 20 2024, 12:28 PM IST / Updated: Aug 20 2024, 12:29 PM IST

BY vijayendraa

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದ್ದು, ರಾಜೀನಾಮೆ ನೀಡಿ ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದ್ದು, ರಾಜೀನಾಮೆ ನೀಡಿ ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸೋಮವಾರ ವಿಧಾನಸೌಧ-ವಿಕಾಸಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ-ಜೆಡಿಎಸ್‌ ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆಯನ್ನು ಸಿದ್ದರಾಮಯ್ಯ ಉಳಿಸಿಕೊಂಡಿಲ್ಲ. ಸಮಾಜವಾದಿ ಎನ್ನುತ್ತಲೇ ಅವರು ಮಜಾವಾದಿಯಾಗಿದ್ದಾರೆ. ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಇಲ್ಲ ಎಂದಿದ್ದಾರೆ. ಆದರೆ, ಈಗ ಮೈತುಂಬೆಲ್ಲಾ ಅಳಿಸಲಾಗದ ಭ್ರಷ್ಟಾಚಾರದ ಕಲೆಗಳು ತುಂಬಿವೆ. ಮತ್ತೊಬ್ಬರ ನೈತಿಕತೆ ಕುರಿತು ಮಾತನಾಡಿರುವ ಅವರು ನೈತಿಕತೆ ಇದ್ದರೆ ಮೊದಲು ರಾಜೀನಾಮೆ ನೀಡಲಿ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ- ಜೆಡಿಎಸ್ ನಿರಂತರ ಹೋರಾಟ ನಡೆಸುತ್ತಿವೆ. ಹೋರಾಟ ಇದೀಗ ತಾರ್ಕಿಕ ಅಂತ್ಯಕ್ಕೆ ಬಂದಿದೆ. ಮೈಸೂರಿನ ಮುಡಾದಿಂದ ನಿವೇಶನಗಳನ್ನು ನುಂಗಿ ಹಾಕಿದ್ದಾರೆ. ರಾಜ್ಯಪಾಲರು ಪ್ರಕರಣ ಸಂಬಂಧ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ ಎಂದರು.

ಭಂಡತನ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಆದರೆ, ಸಿದ್ದರಾಮಯ್ಯನವರು ಗೂಂಡಾಗಿರಿಗೆ ಇಳಿದಿದ್ದಾರೆ. ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರ್ಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು- ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಸಿದ್ದರಾಮಯ್ಯ ಹೊರಗೆ ಬರಬೇಕು. ಕಾನೂನನ್ನು ಎದುರಿಸಬೇಕು ಎಂದು ಆಗ್ರಹಿಸಿದರು.

ಸಾಕಷ್ಟು ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡಲಿ, ನಾವೇನು ಬೇಡ ಎಂದಿಲ್ಲ. ಆದರೆ, ಮೊದಲು ರಾಜೀನಾಮೆ ನೀಡಿ ನಂತರ ಕಾನೂನು ಹೋರಾಟ ಮಾಡಲಿ ಎಂದು ಹೇಳಿದರು.