ಸಾರಾಂಶ
ಬೆಂಗಳೂರು : ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮುಖಂಡರಾದ ಉದಯಕುಮಾರ್ ಶೆಟ್ಟಿ ಅವರ ಹೆಸರುಗಳು ಪ್ರಮುಖವಾಗಿ ಪ್ರಸ್ತಾಪವಾಗಿವೆ.
ಸೋಮವಾರ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ನಡೆಯಲಿದ್ದು, ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಸೇರಿದಂತೆ ಇನ್ನೂ ಘೋಷಣೆಯಾಗದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಚರ್ಚೆ ನಡೆಯಲಿದೆ.
ಈಗಾಗಲೇ ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿರುವುದರಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಹೆಚ್ಚು ಚರ್ಚೆ ನಡೆಯುವ ನಿರೀಕ್ಷೆಯಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾಗಿರುವುದರಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ನಳಿನ್‌ಕುಮಾರ್ ಕಟೀಲ್ ಅವರಿಗೆ ರಾಜಕೀಯ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಪಕ್ಷದಲ್ಲಿ ಕೇಳಿಬರುತ್ತಿದೆ. ಆದರೆ, ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದ್ದ ಪೂಜಾರಿ ಅವರ ಸ್ಥಾನಕ್ಕೆ ಒಬಿಸಿ ವರ್ಗದವರಿಗೇ ನೀಡಬೇಕು ಎಂದಾದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಬೇಕು ಎಂಬ ಪ್ರತಿಪಾದನೆ ವ್ಯಕ್ತವಾಗಿದೆ. ಮೇಲಾಗಿ ಪ್ರಮೋದ್ ಕೂಡ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇವರೊಂದಿಗೆ ಪಕ್ಷದ ಮುಖಂಡರಾದ ಉದಯಕುಮಾರ್ ಶೆಟ್ಟಿ ಅವರ ಹೆಸರೂ ಚರ್ಚೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಬಹುತೇಕ ಈ ಮೂರು ಹೆಸರುಗಳನ್ನೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಹೈಕಮಾಂಡ್‌ಗೆ ಶಿಫಾರಸು ಮಾಡುವ ಸಂಭವವಿದೆ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.