ನವದೆಹಲಿ: ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ‘ಖರ್ಗೆ ಅವರ ಪ್ರಚಾರಗಳಿಂದ ನಿರ್ಬಂಧ ವಿಧಿಸಬೇಕು’ ಎಂದು ಒತ್ತಾಯಿಸಿದೆ.

ಚುನಾವಣಾ ಆಯೋಗಕ್ಕೆ ದೂರು

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು, ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘ್ವಾಲ್ ಅವರನ್ನೊಳಗೊಂಡ ನಿಯೋಗ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಇದು ದೇಶದ ಜನರು ನೀಡಿದ ಜನಾದೇಶಕ್ಕೆ ಮಾಡಿದ ಅವಮಾನ

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ, ‘ಇದು ದೇಶದ ಜನರು ನೀಡಿದ ಜನಾದೇಶಕ್ಕೆ ಮಾಡಿದ ಅವಮಾನ. ಇಡೀ ಚುನಾವಣಾ ವ್ಯವಸ್ಥೆಗೆ ಮಾಡಿದ ಅಗೌರವ. ಚುನಾವಣಾ ಆಯೋಗವು ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು. ಅಲ್ಲದೆ, ಖರ್ಗೆ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.