ಸಾರಾಂಶ
ಹರ್ಯಾಣ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಮುಡಾ ಹಗರಣ ಪ್ರಸ್ತಾಪಿಸಿ ತಮ್ಮನ್ನು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರು : ಹರ್ಯಾಣ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಮುಡಾ ಹಗರಣ ಪ್ರಸ್ತಾಪಿಸಿ ತಮ್ಮನ್ನು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ಮೋದಿ ಅವರು, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ತೋರಿಸಿದರೆ, ಮೋದಿ ಅವರನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುವುದಾಗಿ ಸವಾಲು ಹಾಕಿದ್ದಾರೆ. ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ ಎಂದು ಪಂಥಾಹ್ವಾನ ನೀಡಿದ್ದಾರೆ.
ಮೋದಿ ಟೀಕೆ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ಸುದೀರ್ಘ ಟ್ವೀಟ್ ಮಾಡಿರುವ ಸಿಎಂ, ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರು. ಹಗರಣದ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಮೋದಿ ಅವರಿಗೆ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು? ಎಂದು ಕೇಳಿದ್ದಾರೆ.
ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರಿಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಲೇವಡಿ ಮಾಡಿದ್ದಾರೆ.