ಅನಂತ್‌ ಹೆಗಡೆ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲ: ಬಿವೈ ವಿಜಯೇಂದ್ರ

| Published : Jan 16 2024, 01:46 AM IST / Updated: Jan 16 2024, 11:26 AM IST

BY Vijayendra

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸಂಸದ ಅನಂತಕುಮಾರ ಹೆಗಡೆ ಮಾಡಿರುವ ಹೇಳಿಕೆಗಳು ಪಕ್ಷದ್ದಲ್ಲ ಹೊರತು ವೈಯಕ್ತಿಕ ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರ ಹೇಳಿಕೆಗಳು ಪಕ್ಷದ ನಿಲುವಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನಂತಕುಮಾರ ಹೆಗಡೆ ಅವರ ಹೇಳಿದ್ದನ್ನು ನಾನು ಕೂಡ ಗಮನಿಸಿದ್ದೇನೆ. ಅದು ಅವರ ವೈಯಕ್ತಿಕ ಹೇಳಿಕೆ ಹೊರತು ಪಕ್ಷದ ನಿಲುವಲ್ಲ. ಅವರ ಬಳಿ ನಾನು ವೈಯಕ್ತಿಕವಾಗಿ ಚರ್ಚೆ ಮಾಡುತ್ತೇನೆ’ ಎಂದು ತಿಳಿಸಿದರು.

ಇತ್ತೀಚೆಗೆ ಕುಮಟಾದಲ್ಲಿ ಮಾಡಿದ ಭಾಷಣದಲ್ಲಿ ಅನಂತಕುಮಾರ ಹೆಗಡೆ ಅವರು ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. 

ಅಲ್ಲದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವು ಮಸೀದಿಗಳು ಮೂಲತಃ ದೇವಾಲಯಗಳಾಗಿದ್ದು, ಅವನ್ನು ತೆರವು ಮಾಡಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದ್ದರು. 

ಅನಂತಕುಮಾರ ಹೆಗಡೆ ಅವರ ಮಾತುಗಳನ್ನು ಕಾಂಗ್ರೆಸ್‌ ಪಕ್ಷ ಹಾಗೂ ಕಾಂಗ್ರೆಸ್‌ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿಯಲ್ಲೂ ಅವರ ಹೇಳಿಕೆಯ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿವೆ.