ಮುಡಾ: ಸಿಎಂ ಬೆನ್ನಿಗೆ ನಿಂತ ಒಬಿಸಿ ಶಾಸಕರು - ಹಿಂದುಳಿದ ‘ಕೈ’ ಶಾಸಕರು, ಸಚಿವರ ಸಭೆ

| Published : Oct 04 2024, 07:15 AM IST

Siddaramaiah

ಸಾರಾಂಶ

ಕಾಂಗ್ರೆಸ್‌ ಪಕ್ಷದ ಹಿಂದುಳಿದ ವರ್ಗಗಳ ಹಲವಾರು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಬಲವಾಗಿ ನಿಲ್ಲಲು ತೀರ್ಮಾನಿಸಿದ್ದಾರೆ.

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಹಿಂದುಳಿದ ವರ್ಗಗಳ ಹಲವಾರು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಬಲವಾಗಿ ನಿಲ್ಲಲು ತೀರ್ಮಾನಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಸಚಿವರು, ವಿಧಾನಸಭೆ ಹಾಗೂ ಪರಿಷತ್ತಿನ ಸದಸ್ಯರು ಸಭೆ ಸೇರಿ ಈ ತೀರ್ಮಾನ ಕೈಗೊಂಡರು ಎಂದು ಮೂಲಗಳು ಹೇಳಿವೆ.

ಇದೇ ವೇಳೆ, ಹಿಂದುಳಿದ ವರ್ಗಗಳ ಪ್ರಬಲ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಪಕ್ಷಗಳು ರಾಜಕೀಯವಾಗಿ ಷಡ್ಯಂತ್ರ ನಡೆಸಿವೆ. ನಿರಂತರವಾಗಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿವೆ. ಆದರೆ, ಯಾವುದೇ ಕಾರಣಕ್ಕೂ ಈ ಷಡ್ಯಂತ್ರಕ್ಕೆ ಮುಖ್ಯಮಂತ್ರಿ ಅವರು ಬಲಿಯಾಗಬಾರದು. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗದ ಎಲ್ಲ ಶಾಸಕರೂ ಗಟ್ಟಿಯಾಗಿ ಅವರ ಬೆನ್ನಿಗೆ ನಿಲ್ಲಬೇಕು ಎಂದು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಸಚಿವರಾದ ಬೈರತಿ ಸುರೇಶ್‌, ಸಂತೋಷ್ ಲಾಡ್, ಮಾಜಿ ಸಚಿವ ಎಚ್‌.ಎಂ.ರೇವಣ್ಣ ಸೇರಿದಂತೆ ಪಕ್ಷದ ಹಿಂದುಳಿದ ವರ್ಗಕ್ಕೆ ಸೇರಿದ ಶಾಸಕರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.