ಸಾರಾಂಶ
ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ. 1ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ನೇತೃತ್ವದಲ್ಲಿ ಅಲೆಮಾರಿ ಸಮುದಾಯದ ಜನರು ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರು : ಮೀಸಲಾತಿ ಒಳವರ್ಗೀಕರಣದಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ. 1ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ನೇತೃತ್ವದಲ್ಲಿ ಅಲೆಮಾರಿ ಸಮುದಾಯದ ಜನರು ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಸರ್ಕಾರ ಮೀಸಲಾತಿ ನಿಗದಿಯಲ್ಲಿ ಕೈಗೊಂಡ ನಿರ್ಧಾರದಿಂದ 49 ಅಲೆಮಾರಿ, 10 ಅತೀ ಸೂಕ್ಷ್ಮ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗಿದೆ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ಈ ಮೀಸಲನ್ನು ಮರುಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸರ್ಕಾರದ ನಿರ್ಧಾರ ಸುಪ್ರೀಂ ಕೋರ್ಟ್ ತೀರ್ಪು ಮತ್ತು ನ್ಯಾ.ಎಚ್.ಎನ್. ನಾಗಮೋಹನ್ ದಾಸ್ ಸಮಿತಿಯ ವರದಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಾ. ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಅಲೆಮಾರಿಗಳ ಸಂಖ್ಯೆ ಕಡಿಮೆ ಇರಬಹುದು. ಆದರೆ, ಅವರ ಬೇಡಿಕೆಯಲ್ಲಿ ಸತ್ಯವಿದೆ. ಅಲೆಮಾರಿಗಳಿಗೆ ಸಾಂವಿಧಾನಿಕ ಹಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಅರಿವಿದೆ. ಅಲೆಮಾರಿಗಳ ಹಕ್ಕು ಕೊಡದೆ ಪ್ರಜಾಪ್ರಭುತ್ವ ಅರ್ಥಪೂರ್ಣ ಆಗುವುದಿಲ್ಲ. ಸರ್ಕಾರ ಅಂತಃಕರಣದಿಂದ ಯೋಚಿಸಬೇಕು ಎಂದು ತಿಳಿಸಿದರು.
ಚಿಂತಕ ಶಿವಸುಂದರ್ ಮಾತನಾಡಿ, ಬಲಾಢ್ಯರು ಮಾತ್ರವಲ್ಲದೆ ಅಲೆಮಾರಿಗಳಿಗೂ ಒಳ ಮೀಸಲಾತಿ ಬೇಕು. ಒಳಮೀಸಲಾತಿ ಪರಿಷ್ಕರಿಸುವ ಬದ್ಧತೆಯನ್ನು ಸರ್ಕಾರ ಮಾಡಲೇಬೇಕು. ಇಲ್ಲವಾದರೆ ಇದು ಚಾರಿತ್ರಿಕ ಸಾಮಾಜಿಕ ಅನ್ಯಾಯವಾಗುತ್ತದೆ ಎಂದರು.
ಹೋರಾಟಗಾರ ವಡ್ಡಗೆರೆ ನಾಗರಾಜಯ್ಯ, ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಅಲೆಮಾರಿ ಸಮುದಾಯಗಳ ಕಲಾವಿದರು ಭಾಗಿಯಾಗಿದ್ದರು.