ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) 5 ಪಾಲಿಕೆಗಳಿಗೆ ಸದ್ಯದಲ್ಲೇ ಚುನಾವಣೆ ಘೋಷಣೆ ಆಗುವುದು ಖಚಿತವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಹತ್ವದ ಸಭೆ ನಡೆಸಿದ್ದಾರೆ.

ಬೆಂಗಳೂರು : ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) 5 ಪಾಲಿಕೆಗಳಿಗೆ ಸದ್ಯದಲ್ಲೇ ಚುನಾವಣೆ ಘೋಷಣೆ ಆಗುವುದು ಖಚಿತವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಹತ್ವದ ಸಭೆ ನಡೆಸಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆ

ಭಾನುವಾರ ಸಂಜೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ ಸಹ ಹಾಜರಿದ್ದರು.

ಇತ್ತೀಚೆಗೆ ರಾಜ್ಯ ಚುನಾವಣಾ ಆಯುಕ್ತರು ಜಿ.ಎಸ್. ಸಂಗ್ರೇಶಿ ಅವರು ಜೂನ್‌ ತಿಂಗಳಲ್ಲಿ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸುರ್ಜೇವಾಲ ಜತೆ ನಡೆದ ಸಭೆಯಲ್ಲಿ ಚುನಾವಣೆ ಕುರಿತು ಎಂಬ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಜೊತೆಗೆ ಯಾವಾಗ ಚುನಾವಣೆ ಘೋಷಣೆಯಾದರೂ ಪಕ್ಷ ಸಂಪೂರ್ಣವಾಗಿ ಚುನಾವಣೆ ಸಜ್ಜಾಗಿರಬೇಕು ಎಂದು ನಿರ್ಧರಿಸಲಾಗಿದೆ.

ಎಸ್‌ಐಆರ್‌ ಬಗ್ಗೆಯೂ ಚರ್ಚೆ:

ಸಭೆಯಲ್ಲಿ ಎಸ್‌ಐಆರ್‌ ಹಾಗೂ ಅದರ ಪರಿಣಾಮಗಳ ಕುರಿತು ಸಹ ಚರ್ಚಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಸ್‌ಐಆರ್‌ ಬಗ್ಗೆ ಸಭೆ ನಡೆದಿತ್ತು. ಆ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಎಸ್‌ಐಆರ್‌ ಬಗ್ಗೆ ರಾಜ್ಯ ಸರ್ಕಾರ ಯಾವೆಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸಹ ಪ್ರಾಥಮಿಕವಾಗಿ ಚರ್ಚಿಸಲಾಗಿದೆ. ಇದನ್ನು ಬಿಟ್ಟು ಬೇರೆ ವಿಷಯಗಳ ಬಗ್ಗೆ ಚರ್ಚೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.