ಸರ್ಕಾರಿ ಅಧಿಕಾರಿಗಳು ಜಾತ್ಯತೀತ ದೃಷ್ಟಿಕೋನದಿಂದ ಕೆಲಸ ಮಾಡಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ. ಹಾಗೆಯೇ, ನಮ್ಮ ಸಂವಿಧಾನ ಅಶಕ್ತರಿಗೆ ನೀಡಿರುವ ಹಕ್ಕು ರಕ್ಷಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು : ಸರ್ಕಾರಿ ಅಧಿಕಾರಿಗಳು ಜಾತ್ಯತೀತ ದೃಷ್ಟಿಕೋನದಿಂದ ಕೆಲಸ ಮಾಡಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ. ಹಾಗೆಯೇ, ನಮ್ಮ ಸಂವಿಧಾನ ಅಶಕ್ತರಿಗೆ ನೀಡಿರುವ ಹಕ್ಕು ರಕ್ಷಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿ
ವಿಧಾನಸೌಧದಲ್ಲಿ ಶುಕ್ರವಾರ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಮಾಡಿ ನಂತರ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ರಾಜ್ಯದ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಕೆಲಸ ಮಾಡಬೇಕು.
ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ
ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ ಎಂದಿದ್ದರು. ಅದರಂತೆ ಎಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳಾದರೂ ಇನ್ನೂ ಜಾತಿ ವ್ಯವಸ್ಥೆ ನಿರ್ಮೂಲನೆ ಆಗಿಲ್ಲ. ಎಲ್ಲ ಅಧಿಕಾರಿಗಳು ಜಾತ್ಯತೀತವಾಗಿ ಕಾರ್ಯನಿರ್ವಹಿಸಬೇಕು. ನಮ್ಮ ದೃಷ್ಟಿಕೋನವೂ ಜಾತ್ಯತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಸರಿಯಲ್ಲ. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ. ಅಶಕ್ತರ ಒಳಿತಿಗಾಗಿ ಕೆಲಸ ಮಾಡಬೇಕು. ಅಧಿಕಾರಿಗಳು ಪ್ರಾಮಾಣಿಕರಾಗಿ, ವ್ಯವಸ್ಥೆ ಸರಿಪಡಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.ಸಚಿವರಾದ ಈಶ್ವರ್ ಖಂಡ್ರೆ, ಬಿ.ಎಸ್. ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹಮದ್, ಕಾನೂನು ಸಲಹೆಗಾರ ಪೊನ್ನಣ್ಣ ಇತರರಿದ್ದರು.

