ಸಾರಾಂಶ
ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪನ್ನು ಜಾರಿಗೊಳಿಸಲು ಆಗ್ರಹಿಸಿ ಸೆಪ್ಟೆಂಬರ್ 12 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.
ಚಿಕ್ಕಬಳ್ಳಾಪುರ : ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಕಳೆದ ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದೆ. ಈ ತೀರ್ಪುನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಸೆ.12ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲಕ್ಕೆ ಬೃಹತ್ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಿ.ಎನ್.ಗಂಗಾಧರಪ್ಪ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳಮೀಸಲಾತಿ ಕಲ್ಪಿಸುವುದರೊಂದಿಗೆ ಕರ್ನಾಟಕ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಅವರ ಜನ್ಮದಿನವಾದ ಜೂನ್ 9 ನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕು. ಬಗರ್ ಹುಕುಂ ಸಾಗುವಳಿ ಯನ್ನು ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು ಎಂದು ಹೇಳಿದರು.
ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ಸದರಿ ಆದೇಶವನ್ನು ಅನುಷ್ಠಾನಗೊಳಿಸದೆ ನಿದ್ದೆ ಹೊಡೆಯುತ್ತಿದೆ. ಈ ನಿದ್ದೆ ಹೊಡೆಯುತ್ತಿರುವ ಸರ್ಕಾರವನ್ನು ಬಡಿದೆಬ್ಬಿಸಬೇಕಾಗಿದೆ. ಅದಕ್ಕಾಗಿ ಸಾಮಾಜಿಕ ನ್ಯಾಯದ ಪರ ಇರುವ ದಸಂಸ ಮುಖಂಡರು,ಪ್ರಗತಿಪರ ಚಿಂತಕರು, ವಿದ್ಯಾರ್ಥಿಗಳು, ಬುದ್ದಿ ಜೀವಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸುದ್ದಿ ಗೋಷ್ಟಿಯಲ್ಲಿ ಕರ್ನಾಟಕ ದಸಂಸ ಜಿಲ್ಲಾ ಸಂಚಾಲಕ ಗಂಗಪ್ಪ,ಜಿಲ್ಲಾ ಸಂಘಟನಾ ಸಂಚಾಲಕರಾದ ಹೆಚ್.ಎಂ.ವೆಂಕಟೇಶ್, ಕೃಷ್ಣಮೂರ್ತಿ, ಶ್ರೀನಿವಾಸ್, ಮಂಜುತುಳಸಿ, ತಾಲ್ಲೂಕು ಸಂಚಾಲಕ ಎಂ.ಎನ್.ಮುನಿರಾಜು, ಮತ್ತಿತರರು ಇದ್ದರು.