ಸಾರಾಂಶ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಿಳಿಸಿದರು.
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ. ಸರ್ಕಾರ ಹಾಗೂ ನನ್ನ ತಂದೆ ರಾಮಲಿಂಗಾರೆಡ್ಡಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಿಳಿಸಿದರು.
ಬಿಟಿಎಂ ಲೇಔಟ್, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಮಾತನಾಡಿದ ಅವರು, ಗಾರ್ಡನ್ ಸಿಟಿ ಬೆಂಗಳೂರನ್ನು ಐಟಿ ಸಿಟಿಯನ್ನಾಗಿ ಮಾಡಿ ವಿಶ್ವ ಮಟ್ಟದಲ್ಲಿ ನಗರದ ಕೀರ್ತಿ ಹೆಚ್ಚುವಂತೆ ಮಾಡಿದ್ದು ಕಾಂಗ್ರೆಸ್. ಔದ್ಯೋಗಿಕವಾಗಿ ಐಟಿ-ಬಿಟಿ ಕ್ಷೇತ್ರದಲ್ಲಿ ವಿಫುಲ ಅವಕಾಶ ದೊರೆಯುವಂತೆ ಮಾಡಲಾಯಿತು. ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಯಾಗಲು ಕಾಂಗ್ರೆಸ್ ಗೆಲ್ಲುವುದು ಅತ್ಯವಶ್ಯಕ. ಅದಕ್ಕಾಗಿ ಕ್ಷೇತ್ರ ವ್ಯಾಪ್ತಿಯ ಮತದಾರರು ಈ ಬಾರಿ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಐದು ಗ್ಯಾರಂಟಿ ಯೋಜನೆಗಳು ಕೇಂದ್ರ ಸರ್ಕಾರದ ವೈಫಲ್ಯದಿಂದ ಉಂಟಾಗಿರುವ ಬೆಲೆ ಏರಿಕೆಗೆ ಪರಿಹಾರ ದೊರೆಕಿಸಿಕೊಟ್ಟಿದೆ. ಗೃಹ ಲಕ್ಷ್ಮೀ, ಶಕ್ತಿ ಯೋಜನೆಗಳು ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುತ್ತಿವೆ. ಅಂತಹ ಯೋಜನೆಗಳ ಬಗ್ಗೆ ಬಿಜೆಪಿ ಅಪಹಾಸ್ಯ ಮಾಡುತ್ತಿದ್ದು, ಅದು ಜನರ ಕಷ್ಟವನ್ನು ನೋಡಿ ಅಪಹಾಸ್ಯ ಮಾಡಿದಂತಿದೆ. ಹೀಗಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರು ಅಭಿವೃದ್ಧಿ, ಸಹಬಾಳ್ವೆಗಾಗಿ ಈ ಬಾರಿ ಕಾಂಗ್ರೆಸ್‌ನ್ನು ಬೆಂಬಲಸಲು ನಿರ್ಧರಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಜನರು ಆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಮಾಡುವತ್ತ ಹೆಚ್ಚಿನ ಗಮನಹರಿಸಲಾಗುವುದು. ಜತೆಗೆ ಪಕ್ಷ ಭೇದ ಮರೆತು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ 8 ವಿಧಾನಸಭಾ ಕ್ಷೇತ್ರಗಳ ಶಾಸಕರೊಂದಿಗೆ ಸಮಾಲೋಚಿಸಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುತ್ತೇನೆ. ನನ್ನ ತಂದೆ ರಾಮಲಿಂಗಾರೆಡ್ಡಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ನನಗೆ ಮಾದರಿಯಾಗಿದ್ದು, ಅವರಂತೆಯೇ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಜತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನ ಸಮರ್ಪಕ ಬಳಕೆಗೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸೌಮ್ಯಾ ರೆಡ್ಡಿ ಪರಶ್ರೀನಿವಾಸ್ ಪ್ರಚಾರಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಶ್ ಪ್ರಚಾರ ನಡೆಸಿದರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿ, ಕ್ಷೇತ್ರದ ಅಭಿವೃದ್ಧಿಗೆ ಸೌಮ್ಯಾ ರೆಡ್ಡಿ ಪರ ಮತಚಲಾಯಿಸುವಂತೆ ಕೋರಿದರು. ಇದೇ ವೇಳೆ ಕೇಂದ್ರ ಸರ್ಕಾರದ ವೈಫಲ್ಯ, ಅನುದಾನ ಹಂಚಿಕೆಯಲ್ಲಿ ಕೇಂದ್ರದ ಮಲತಾಯಿ ಧೋರಣೆಗಳ ಬಗ್ಗೆ ವಿವರಿಸಿದರು. ಈ ವೇಳೆ ಯುವ ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥ ಗೌಡ ಇತರರಿದ್ದರು.
ಇಂಡಿಯಾ ಒಕ್ಕೂಟನಾಯಕರ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಸೌಮ್ಯಾ ರೆಡ್ಡಿ ಸೋಮವಾರ ಬೆಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿನ ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾಗಿ ಮನವಿ ಮಾಡಿದರು. ಬಸವನಗುಡಿ, ಚಿಕ್ಕಪೇಟೆ, ಜಯನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿನ ಇಂಡಿಯಾ ಒಕ್ಕೂಟದ ಅಂಗಪಕ್ಷಗಳ ಮುಖಂಡರನ್ನು ಭೇಟಿಯಾಗಿ ಈವರೆಗೆ ಚುನಾವಣಾ ಪ್ರಚಾರದ ಬಗ್ಗೆ ವಿವರಿಸಿ, ಮುಂದಿನ ಪ್ರಚಾರ ಹಾಗೂ ಮತದಾರರನ್ನು ಒಲಿಸಲು ಬೆಂಬಲ ನೀಡುವಂತೆ ಕೋರಿದರು.