ಸಾರಾಂಶ
ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯ ಸುಮಾರು 25ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು : ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯ ಸುಮಾರು 25ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಅಲ್ಲದೆ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆವರೆಗೂ ಮುಂದುವರೆಸಬೇಕು ಎಂಬ ಆಗ್ರಹವನ್ನೂ ಮುಂದಿಟ್ಟಿದ್ದಾರೆ.
ಭಾನುವಾರ ಬೆಳಗ್ಗೆ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ ಈ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು, ಯತ್ನಾಳ್ ಅವರ ಹೇಳಿಕೆಗಳಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತಿದೆ. ಕಾರ್ಯಕರ್ತರಿಗೆ ಅಪಮಾನವಾಗುತ್ತಿದೆ. ಅವರ ಬಾಯಿಗೆ ಬೀಗ ಹಾಕದಿದ್ದರೆ ಪಕ್ಷದ ಸಂಘಟನೆಗೆ ಹಾನಿಯಾಗಲಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ ಅವರು, ವರಿಷ್ಠರ ಜತೆ ಮಾತನಾಡುತ್ತೇನೆ. ಹತ್ತು ದಿನ ಸಮಯ ಕೊಡಿ. ಎಲ್ಲವೂ ಒಳ್ಳೆಯದಾಗಲಿದೆ ಎಂಬ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಅವರೆಲ್ಲರೂ(ಯತ್ನಾಳ್ ನೇತೃತ್ವದ ತಂಡ) ಸ್ವಯಂಘೋಷಿತ ನಾಯಕರು. ಅವರಿರುವುದೇ ನಾಲ್ಕು ಜನ. ನಾವು ಅನೇಕ ನಾಯಕರು ನಾವು-ನಾವೇ ಚರ್ಚಿಸಿ ಕಾರ್ಯಕರ್ತರ ಭಾವನೆಗಳನ್ನು ವ್ಯಕ್ತಪಡಿಸಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆವು ಎಂದು ಹೇಳಿದರು.
10ರಂದು ಸಭೆ:
ಈ ತಿಂಗಳ 10 ರಂದು ದಾವಣಗೆರೆಯಲ್ಲಿ ನಾವೆಲ್ಲರೂ ಸಭೆ ಸೇರುತ್ತೇವೆ. ಸುಮಾರು 60ಕ್ಕೂ ಹೆಚ್ಚು ನಾಯಕರು ಪಾಲ್ಗೊಳ್ಳಲಿದ್ದಾರೆ. ಆ ಸಭೆಯಲ್ಲಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ತಿಳಿಸಿದರು.
ಮಾಜಿ ಸಚಿವ ಹಾಗೂ ಹಾಲಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಮಾತನಾಡಿ, ಯಡಿಯೂರಪ್ಪ ಅವರನ್ನು ಮತ್ತು ವಿಜಯೇಂದ್ರ ಅವರನ್ನು ಬೈದರೆ ಅದು ಪಕ್ಷವನ್ನೇ ಬೈದಂತೆ. ಆ ಕೆಲಸ ಯಾರೊಬ್ಬರೂ ಮಾಡಕೂಡದು. ಕೂಡಲೇ ಇದಕ್ಕೆ ಒಂದು ಬಂದೋಬಸ್ತ್ ಮಾಡಬೇಕು. ಹತ್ತು ದಿನ ಸಮಯ ಕೊಡಿ. ಎಲ್ಲವೂ ಒಳ್ಳೆಯದಾಗಲಿದೆ ಎಂಬ ಮಾತನ್ನು ಯಡಿಯೂರಪ್ಪ ನೀಡಿದ್ದಾರೆ ಎಂದರು.
ಮಾಜಿ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡು ಮಾತನಾಡಿ, ಇಲ್ಲಿವರೆಗೆ ನಡೆದಿರುವ ವಿದ್ಯಮಾನಗಳ ಬಗ್ಗೆ ಯಡಿಯೂರಪ್ಪ ಅವರಿಗೆ ವಿವರಣೆ ನೀಡಿದ್ದೇವೆ. ಮುಂಬರುವ ವಿಧಾನಸಭಾ ಚುನಾವಣೆವರೆಗೆ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸಬೇಕು. ಚುನಾವಣೆಯಲ್ಲಿ 130 ಸ್ಥಾನ ಗೆಲ್ಲಬೇಕು. ಈ ವಿಷಯದಲ್ಲಿ ಮಾರ್ಗದರ್ಶನ ಮಾಡಬೇಕು ಎಂದು ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ ಎಂದು ವಿವರಿಸಿದರು.
ಮಾಜಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ವಿಜಯೇಂದ್ರ ಅವರ ಎರಡು ದಿನಗಳ ಪ್ರವಾಸದ ವೇಳೆ ಕಾರ್ಯಕರ್ತರ ಉಸಿರು ಬಂದಂತಾಯಿತು ಎಂಬ ಅಭಿಪ್ರಾಯವನ್ನು ಅನೇಕ ಕಾರ್ಯಕರ್ತರು ವ್ಯಕ್ತಪಡಿಸಿದರು. ವಿಜಯೇಂದ್ರ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಬೇಕು. ಈಗಲೂ ಕಾಲ ಮಿಂಚಿಲ್ಲ. ಈ ಕೆಲ ನಾಯಕರು ತಮ್ಮ ವಿರೋಧ ಬಿಟ್ಟು ವಿಜಯೇಂದ್ರ ಅವರ ಜತೆ ನಿಲ್ಲಬೇಕು ಎಂದು ಆಗ್ರಹಿಸಿದರು.