ಕ್ಷೇತ್ರ ಮರು ವಿಂಗಡಣೆ ವಿಚಾರದಲ್ಲಿ ಅನ್ಯಾಯ - ಆದರೆ ರಾಜ್ಯಕ್ಕೆ 2 ಎಂಪಿ ಕ್ಷೇತ್ರ ಖೋತಾ : ಮುಖ್ಯಮಂತ್ರಿ ಸಿದ್ದರಾಮಯ್ಯ

| N/A | Published : Feb 28 2025, 12:50 AM IST / Updated: Feb 28 2025, 04:11 AM IST

ಕ್ಷೇತ್ರ ಮರು ವಿಂಗಡಣೆ ವಿಚಾರದಲ್ಲಿ ಅನ್ಯಾಯ - ಆದರೆ ರಾಜ್ಯಕ್ಕೆ 2 ಎಂಪಿ ಕ್ಷೇತ್ರ ಖೋತಾ : ಮುಖ್ಯಮಂತ್ರಿ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಅವರಿಗೆ ಇರುವಂತೆ ಕಾಣಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಹೇಳಿದ್ದಾರೆ.

 ಬೆಂಗಳೂರು :  ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಅವರಿಗೆ ಇರುವಂತೆ ಕಾಣಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಹೇಳಿದ್ದಾರೆ.

ಕೇಂದ್ರದ ಅನ್ಯಾಯದ ವಿರುದ್ಧ ಸಮಗ್ರ ರೂಪದ ಹೋರಾಟ ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿ ಮಾತುಕತೆ ನಡೆಸಲಾಗುತ್ತಿದೆ ಎಂದೂ ಅವರು ಇದೇ ವೇಳೆ ತಿಳಿಸಿದ್ದಾರೆ.

ಕ್ಷೇತ್ರ ಮರುವಿಂಗಡಣೆ ವೇಳೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂಬ ಕೇಂದ್ರ ಸಚಿವ ಅಮಿತ್‌ ಶಾ ಹೇಳಿಕೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಅಮಿತ್‌ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ ಎಂದು ಹರಿಹಾಯ್ದಿದ್ದಾರೆ.

ಈ ನಡೆ ಹಿಂದೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡುವ ದುರುದ್ದೇಶವಿದೆ. ದುರುದ್ದೇಶವಿಲ್ಲದಿದ್ದರೆ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡುತ್ತಾರೋ ಅಥವಾ ಲೋಕಸಭೆ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡುತ್ತಾರೋ ಎಂಬುಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆ ನೋಡಿದರೆ ಅವರಿಗೆ ಮಾಹಿತಿ ಕೊರತೆ ಇರಬಹುದು. ಇಲ್ಲವೇ ಕರ್ನಾಟಕವೂ ಸೇರಿ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದಿದ್ದಾರೆ.

ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರುವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ. ಈ ಅನ್ಯಾಯ ತಪ್ಪಿಸಲಿಕ್ಕಾಗಿಯೇ ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಹಿಂದಿನ ಎರಡು ಕ್ಷೇತ್ರ ಮರುವಿಂಗಡಣೆಗೆ 1971ರ ಜನಗಣತಿಯನ್ನೇ ಆಧಾರವಾಗಿಟ್ಟುಕೊಳ್ಳಲಾಗಿತ್ತು. ಕಳೆದ 50 ವರ್ಷಗಳಲ್ಲಿ ದಕ್ಷಿಣದ ರಾಜ್ಯಗಳು ಪರಿಣಾಮಕಾರಿ ಕ್ರಮಗಳ ಮೂಲಕ ಜನಸಂಖ್ಯೆ ನಿಯಂತ್ರಿಸಿರುವುದು ಮಾತ್ರವಲ್ಲ, ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿವೆ. ಇದೇ ವೇಳೆ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶದಂತಹ ಉತ್ತರದ ರಾಜ್ಯಗಳು ಜನಸಂಖ್ಯೆ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದು ಮಾತ್ರವಲ್ಲ, ಅಭಿವೃದ್ಧಿಯ ಹಾದಿಯಲ್ಲಿ ಇನ್ನೂ ಕುಂಟುತ್ತಾ ಸಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದಕ್ಷಿಣ ರಾಜ್ಯಗಳಿಗೆ ನಷ್ಟ ತಿಳಿದಿಲ್ಲವೇ?:

ಕ್ಷೇತ್ರ ಮರುವಿಂಗಡಣೆಯನ್ನು ಇತ್ತೀಚಿನ ಜನಗಣತಿಯಿಂದ ಪಡೆದ ಜನಸಂಖ್ಯೆ ಅನುಪಾತದ ಮೇಲೆ ನಡೆಸಿದರೆ ಜನಸಂಖ್ಯೆ ನಿಯಂತ್ರಣ ಮಾಡಿರುವ ಕರ್ನಾಟಕವೂ ಸೇರಿ ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆ. ಇಲ್ಲದಿದ್ದರೆ ಉತ್ತರದ ರಾಜ್ಯಗಳ ಕ್ಷೇತ್ರಗಳ ಪ್ರಮಾಣದಲ್ಲಿ ಏರಿಕೆ ಆಗಲಿದೆ. ಈ ಎರಡೂ ಬೆಳವಣಿಗಳಿಂದ ದಕ್ಷಿಣದ ರಾಜ್ಯಗಳೇ ನಷ್ಟ ಅನುಭವಿಸಲಿದೆ ಎನ್ನುವುದು ಗೃಹ ಸಚಿವ ಶಾ ಅವರಿಗೆ ತಿಳಿದಿಲ್ಲವೇ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

ರಾಜ್ಯದ 28 ಲೋಕಸಭೆ ಸ್ಥಾನ 26ಕ್ಕಿಳಿಯುವ ಸಾಧ್ಯತೆ: ಸಿಎಂ 

ಕ್ಷೇತ್ರ ಮರುವಿಂಗಡಣೆ ಪರಿಣಾಮಗಳ ಬಗ್ಗೆ ಹಲವಾರು ಅಧ್ಯಯನ ನಡೆದಿವೆ. ಇವುಗಳ ಪ್ರಕಾರ ಇತ್ತೀಚಿನ ಜನಗಣತಿಯನ್ನು (2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕಿಳಿಯುವ ಸಾಧ‍್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಅವಿಭಜಿತ ಆಂಧ್ರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42ರಿಂದ 34, ಕೇರಳದ ಸಂಖ್ಯೆ 20ರಿಂದ 12ಕ್ಕೆ, ತಮಿಳುನಾಡಿನ ಸಂಖ್ಯೆ 39ರಿಂದ 31ಕ್ಕೆ ಇಳಿಯಲಿದೆ. ಇದೇ ವೇಳೆ ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 80ರಿಂದ 91, ಬಿಹಾರದ ಸಂಖ್ಯೆ 40 ರಿಂದ 50, ಮಧ್ಯಪ್ರದೇಶದ ಸಂಖ್ಯೆ 29ರಿಂದ 33ಕ್ಕೆ ಏರಿಕೆಯಾಗಲಿದೆ. ಇದನ್ನು ಅನ್ಯಾಯ ಎನ್ನದೆ ನ್ಯಾಯ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.