ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವುದಕ್ಕೆ ಆಕ್ರೋಶ : ರಾಜ ಭವನಕ್ಕೆ ನುಗ್ಗಲು ಯತ್ನ

| Published : Aug 18 2024, 01:47 AM IST / Updated: Aug 18 2024, 04:28 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು, ರಾಜಭವನಕ್ಕೆ ನುಗ್ಗಲು ವಿಫಲ ಯತ್ನ ನಡೆಸಿದರು.

 ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು, ರಾಜಭವನಕ್ಕೆ ನುಗ್ಗಲು ವಿಫಲ ಯತ್ನ ನಡೆಸಿದರು.

ರಾಜಭವನದ ಮುಂದೆ ಜಮಾಯಿಸಿದ ಕಾರ್ಯಕರ್ತರು, ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಮುಂದಾದಾಗ ಅವರನ್ನು ಪೊಲೀಸರು ತಡೆದರು. ಆಗ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು. ಕೆಲವರು ರಾಜಭವನಕ್ಕೆ ನುಗ್ಗಲು ಮುಂದಾದಾಗ ಬ್ಯಾರಿಕೇಡ್‌ ಹಾಕಿ ಪೊಲೀಸರು ತಡೆದರು. ಆಗ ರಸ್ತೆಯಲ್ಲೇ ಕುಳಿತ ಕೆಲವರು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.

ಬಿಜೆಪಿ ರಾಷ್ಟ್ರೀಯ ನಾಯಕರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಜನಪರ ಕಾರ್ಯಗಳನ್ನು ಸಹಿಸದೇ ಬಿಜೆಪಿಯವರು ರಾಜಭವನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ನಡೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಿಂದ ಅಭಿಮಾನಿಗಳ ಆಗಮನ

ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಿಂದ ಆಗಮಿಸಿದ ಕೆಲ ಅಭಿಮಾನಿಗಳು ನಗರದಲ್ಲಿನ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿ ಮುಂದೆ ಜಮಾಯಿಸಿ ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದ ಅಭಿಮಾನಿಗಳು, ರಾಜ್ಯಪಾಲರು ಬಿಜೆಪಿ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.