ರಾಘವೇಂದ್ರ ಬ್ಯಾಂಕ್‌ ಠೇವಣಿದಾರರ ಮೇಲೆ ಹಲ್ಲೆ ಆರೋಪ; ತೇಜಸ್ವಿ, ರವಿ ವಿರುದ್ಧ ದೂರು

| Published : Apr 16 2024, 02:03 AM IST / Updated: Apr 16 2024, 04:40 AM IST

ಸಾರಾಂಶ

 ಮತದಾರರಿಗೆ ಬೆದರಿಕೆ ಹಾಕಿದ ಹಾಗೂ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ  ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

 ಬೆಂಗಳೂರು :  ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಬೆದರಿಕೆ ಹಾಕಿದ ಹಾಗೂ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಇತ್ತೀಚೆಗೆ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೇಜಸ್ವಿ ಸೂರ್ಯ ಮತ್ತು ರವಿ ಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಠೇವಣಿದಾರರ ಸಭೆ ನಡೆಸಲಾಗಿದೆ. ಈ ವೇಳೆ ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಬಿಜೆಪಿ ಮಂಡಲ ಅಧ್ಯಕ್ಷ ಗಿರೀಶ್‌ ಸೇರಿದಂತೆ ಇತರರು ಠೇವಣಿದಾರರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. 

ಜತೆಗೆ ಈ ಸಭೆಯ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕ್ಯಾಮೆರಾ ಕಸಿಯಲು ಮುಂದಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ ಸೇರಿದಂತೆ ಇತರರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ಗುಹ, ಬ್ಯಾಂಕ್‌ ಠೇವಣಿದಾರರಾದ ವಿ. ಹರೀಶ್‌, ಲಕ್ಷ್ಮೀ ಮಂಜುಳಾ ಇದ್ದರು.