ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡದಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಶುಕ್ರವಾರ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದರು.
ನವದೆಹಲಿ : ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡದಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳಿದ್ದಾರೆ.
ರಾಹುಲ್ ಗಾಂಧಿ ಭೇಟಿ
ಸಿದ್ದರಾಮಯ್ಯ ಅವರು ಶುಕ್ರವಾರ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದರು.
ಶುಕ್ರವಾರ ಬೆಳಗ್ಗೆ 11ಕ್ಕೆ ರಾಹುಲ್ ಗಾಂಧಿ ಅವರನ್ನು ಸಿದ್ದರಾಮಯ್ಯ ಅವರು 10 ಜನಪಥ್ ನಿವಾಸದಲ್ಲಿ ಭೇಟಿ ಆದರು. ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಅವರು, ‘ಸಿದ್ದರಾಮಯ್ಯ ಜೀ, ಪದೇ ಪದೇ ನಿವೃತ್ತಿಯ ಮಾತಾಡಬೇಡಿ. ನಿಮ್ಮ ಸೇವೆ, ನಾಯಕತ್ವ ಪಕ್ಷಕ್ಕೆ ಬೇಕು’ ಎಂದು ಕಿವಿಮಾತು ಹೇಳಿದರು.
ವಯಸ್ಸಿನ ಹಿನ್ನೆಲೆಯಲ್ಲಿ ನಾನು ಈ ಮಾತು
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ವಯಸ್ಸಿನ ಹಿನ್ನೆಲೆಯಲ್ಲಿ ನಾನು ಈ ಮಾತು ಹೇಳಿದ್ದೆ ಎಂದು ಸಮಜಾಯಿಷಿ ನೀಡಿದರು ಎಂದು ಮೂಲಗಳು ತಿಳಿಸಿವೆ. ಆದರೆ ಭೇಟಿಯ ವೇಳೆ ನಡೆದ ಮಾತುಕತೆಯನ್ನು ಬಹಿರಂಗಪಡಿಸಲು ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ.
ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿ ಅಧ್ಯಕ್ಷರ ಬದಲಾವಣೆ, ವಿಧಾನ ಪರಿಷತ್ ಖಾಲಿ ಸ್ಥಾನಗಳ ಭರ್ತಿ, ಜಾತಿ ಜನಗಣತಿ ಜಾರಿ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಗೆ ಬಂದಿದ್ದಾಗ ಭೇಟಿಗೆ ಸಮಯ ಕೇಳಿದ್ದೆ. ಅದರಂತೆ ಸಮಯ ನೀಡಿದ್ದಾರೆ. ಕೇವಲ ಉಭಯ ಕುಶಲೋಪರಿ ಅಷ್ಟೇ. ಭೇಟಿ ಕುತೂಹಲ ಏನೂ ಇಲ್ಲ ಎಂದು ಹೇಳಿದರು.
ಮಧ್ಯಾಹ್ನ 2 ಗಂಟೆಗೆ ಕೆ.ಸಿ.ವೇಣುಗೋಪಾಲ್ ಅವರನ್ನು ಲೋಧಿ ಎಸ್ಟೇಟ್ ನಿವಾಸದಲ್ಲಿ ಸಿದ್ದರಾಮಯ್ಯ ಭೇಟಿ ಆಗಿ ಮಾತುಕತೆ ನಡೆಸಿದರು. ಸಚಿವ ಸಂಪುಟ ವಿಸ್ತರಣೆ, ನಿಗಮ- ಮಂಡಳಿಗೆ ಹೊಸ ಅಧ್ಯಕ್ಷರ ನೇಮಕ ಕುರಿತು ಸಿದ್ದರಾಮಯ್ಯ ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿ ಭೇಟಿ ಮಾಡಿದ್ದೇನೆ ಅಷ್ಟೇ. ಭೇಟಿಯ ವೇಳೆ ಏನು ಚರ್ಚೆ ನಡೆಯಿತು ಎಂದು ಹೇಳಲು ಸಾಧ್ಯ ಇಲ್ಲ ಎಂದು ಸ್ಪಷ್ಟವಾಗಿ ಮಾಹಿತಿ ನೀಡಲು ನಿರಾಕರಿಸಿದರು.


