ಸಾರಾಂಶ
ವಿಜಯೇಂದ್ರ ಬದಲಾವಣೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಹಕರಿಸಬೇಕು' ಎಂದಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮೇಲೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, 'ಯಡಿಯೂರಪ್ಪ ವಿರುದ್ಧ ಮಾತನಾಡುವ ಹಕ್ಕು ರಮೇಶ ಜಾರಕಿಹೊಳಿಗಿಲ್ಲ' ಎಂದು ಅವರು ಕಿಡಿಕಾರಿದ್ದಾರೆ.
ಕೊಪ್ಪಳ: ವಿಜಯೇಂದ್ರ ಬದಲಾವಣೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಹಕರಿಸಬೇಕು' ಎಂದಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮೇಲೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, 'ಯಡಿಯೂರಪ್ಪ ವಿರುದ್ಧ ಮಾತನಾಡುವ ಹಕ್ಕು ರಮೇಶ ಜಾರಕಿಹೊಳಿಗಿಲ್ಲ' ಎಂದು ಅವರು ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಎಚ್ಚರಿಕೆಯಿಂದ ಮಾತನಾಡಬೇಕು. ರಾಜ್ಯದಲ್ಲಿ ಯಡಿಯೂರಪ್ಪ ಹಳ್ಳಿ ಹಳ್ಳಿ ಅಡ್ಡಾಡಿ ಪಕ್ಷ ಕಟ್ಟಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತ ನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನಾನು ರಾಜ್ಯದ ಅಧ್ಯಕ್ಷನಿದ್ದೇನೆ. ರಮೇಶ ಜಾರಕಿಹೊಳಿ ಇದೀಗ ಪಕ್ಷಕ್ಕೆ ಬಂದಿದ್ದಾರೆ. ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಲಿ. ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ ಎಂದರು.
ಯಾರು ವಿಫಲ ಅಂತ ಅವರ ಕ್ಷೇತ್ರದ ಜನರೇ ಹೇಳುತ್ತಾರೆ. ರಮೇಶ ಜಾರಕಿಹೊಳಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಒಂದುವರೆ ವರ್ಷದಿಂದ ನಿರಂತರ ಹೋರಾಟ ಮಾಡಿದ್ದೇನೆ. ಮುಡಾ ನಿವೇಶನವನ್ನು ಸಿಎಂ ಮರಳಿ ನೀಡಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ರಾಜ್ಯದ ಮುಖ್ಯಮಂತ್ರಿ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದ್ದೇವೆ. ನಮ್ಮ ಪಕ್ಷದಲ್ಲಿ ಎಲ್ಲರೂ ಒಂದಾಗುತ್ತಿದ್ದಾರೆ. ಇನ್ನೊಂದು ತಿಂಗಳಲ್ಲಿ ಎಲ್ಲ ಗೊತ್ತಾಗುತ್ತದೆ. ಕೆಲವೇ ದಿನಗಳಲ್ಲಿ ಪಕ್ಷದಲ್ಲಿ ಎಲ್ಲವೂ ಸರಿಹೋಗುತ್ತದೆ ಎಂದು ಹೇಳಿದರು.