ಸಾರಾಂಶ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.)ದ ತನಿಖೆ ಆರಂಭಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇ.ಡಿ.ಗೆ ಎರಡನೇ ದೂರು ದಾಖಲಾಗಿದೆ.
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ(ಇ.ಡಿ.)ದ ತನಿಖೆ ಆರಂಭಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇ.ಡಿ.ಗೆ ಎರಡನೇ ದೂರು ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ನಿವೇಶನ ವಾಪಸ್ ನೀಡಿರುವುದು ಸಾಕ್ಷ್ಯ ನಾಶಕ್ಕೆ ಸಮವಾಗಿದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಗುರುವಾರ ವಕೀಲ ಪ್ರದೀಪ್ ಕುಮಾರ್ ದೂರು ದಾಖಲಿಸಿದ್ದಾರೆ.
ಮುಡಾ ಹಗರಣ ವಿಚಾರವಾಗಿ ಇ.ಡಿ. ಪ್ರಕರಣ ದಾಖಲಿಸಿದ ಬೆನ್ನಲ್ಲೇ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಮುಖ್ಯಮಂತ್ರಿ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಬಳಿಕ ಮುಡಾ ಸಹ 14 ನಿವೇಶನಗಳ ಮಾಲೀಕತ್ವ ಮತ್ತು ಸ್ವಾಧೀನವನ್ನು ರದ್ದುಪಡಿಸಿದೆ. ಮುಖ್ಯಮಂತ್ರಿಗಳು ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.