ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆ ಬದಿಗೊತ್ತಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ನಗರಕ್ಕೆ ಆಗಮಿಸುತ್ತಿದ್ದಾರೆ. ಚಾಮರಾಜನಗರಕ್ಕೆ ಬಂದರೆ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತದೆ ಎಂಬ ಮೂಢನಂಬಿಕೆ ರಾಜ್ಯದಲ್ಲಿ ಬಲವಾಗಿ ಬೇರೂರಿತ್ತು
ದೇವರಾಜು ಕಪ್ಪಸೋಗೆ
ಚಾಮರಾಜನಗರ : ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆ ಬದಿಗೊತ್ತಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ನಗರಕ್ಕೆ ಆಗಮಿಸುತ್ತಿದ್ದಾರೆ.
ಚಾಮರಾಜನಗರಕ್ಕೆ ಬಂದರೆ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತದೆ ಎಂಬ ಮೂಢನಂಬಿಕೆ ರಾಜ್ಯದಲ್ಲಿ ಬಲವಾಗಿ ಬೇರೂರಿತ್ತು. ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಬಾರಿ ಭೇಟಿ ನೀಡಿ, ಅದರ ನಿವಾರಣೆಗೆ ಯತ್ನಿಸಿದ್ದರು. ಆದರೆ ಆಸ್ತಿಕರಾಗಿರುವ ಡಿ.ಕೆ. ಶಿವಕುಮಾರ್ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.
ಶನಿವಾರ ಮತ್ತು ಭಾನುವಾರ ನಡೆಯಲಿರುವ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಸಿಎಂ ಒಪ್ಪಿಗೆ ಸೂಚಿಸಿದ್ದು, ಭಾನುವಾರ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಅವರು ಭೇಟಿ ನೀಡಲು ಒಪ್ಪಿಗೆ ಸೂಚಿಸಿರುವುದು ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ, ಅಧಿಕಾರಕ್ಕೆ ಬಂದ ಹೊಸತರಲ್ಲಿ ಜಿಲ್ಲೆಗೆ ಭೇಟಿ ನೀಡುವ ಧೈರ್ಯವನ್ನು ಮುಖ್ಯಮಂತ್ರಿಗಳು ತೋರುತ್ತಿರಲಿಲ್ಲ.
ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರದಿಂದ ಕೆಳಗಿಳಿಯವ ಸಂದರ್ಭದಲ್ಲಿ ಭೇಟಿ ನೀಡುವ ಮೂಲಕ ಚಾಮರಾಜನಗರಕ್ಕೆ ಆಗಮಿಸಿದ್ದರು. 16 ವರ್ಷಗಳ ಬಳಿಕ ಚಾಮರಾಜನಗರಕ್ಕೆ ಭೇಟಿ ನೀಡಿದ ಮೊದಲ ಸಿಎಂ ಎನಿಸಿಕೊಂಡಿದ್ದರು.
ನಂತರ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಲವು ಬಾರಿ ಜಿಲ್ಲೆಗೆ ಆಗಮಿಸಿದ್ದರು. ಇಲ್ಲಿಗೆ ಭೇಟಿ ನೀಡಿದಷ್ಟು ನನ್ನ ಅಧಿಕಾರ ಗಟ್ಟಿಯಾಗುತ್ತದೆ ಎಂದು ಹೇಳುವ ಮೂಲಕ ಜಿಲ್ಲೆಗೆ ಅಂಟಿದ್ದ ಮೂಢನಂಬಿಕೆಯನ್ನು ತೊಡೆದು ಹಾಕಲು ಯತ್ನಿಸಿದ್ದರು.
ಕೊಳ್ಳೇಗಾಲದಲ್ಲಿ ಅಭಿವೃದ್ಧಿಗೆ ನಾಂದಿ ಹಾಡಿದ್ದರು ಡಿಕೆಶಿ:
ಸಿಎಂ ಆದ ಕೆಲ ದಿನಗಳಲ್ಲೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಭೇಟಿ ನೀಡಿ ಸಾವಿರಾರು ಕೋಟಿ ರು.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದ ಡಿ.ಕೆ.ಶಿವಕುಮಾರ್, ಇದೀಗ ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವುದು ಜಿಲ್ಲೆಯ ಜನತೆಯಲ್ಲಿ ಉತ್ಸಾಹ ಮೂಡಿಸಿದೆ. ದೇವರ ಮೇಲೆ ಹೆಚ್ಚಿನ ನಂಬಿಕೆ ಇಟ್ಟಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಾರೋ, ಇಲ್ಲವೋ ಎಂಬ ಕುತೂಹಲ ಜಿಲ್ಲೆಯ ಜನತೆಯಲ್ಲಿ ಇತ್ತು. ಕೊಳ್ಳೇಗಾಲಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೂ ಭೇಟಿ ನೀಡುತ್ತಿರುವುದು ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಉತ್ತಮ ಬೆಳವಣಿಯಾಗಿದೆ ಎನ್ನುತ್ತಾರೆ ಹಿರಿಯ ರೈತ ಮುಖಂಡ ಹೆಗ್ಗವಾಡಿಪುರ ಮಹೇಶ್ಕುಮಾರ್.
ಧೈರ್ಯವಾಗಿ ಡಿಕೆ ಬರ್ತಿದ್ದಾರೆ
ಮುಖ್ಯಮಂತ್ರಿಗಳು ಬರಲು ಹಿಂಜರಿಯುತ್ತಿದ್ದ ಜಿಲ್ಲೆಗೆ ಹಿಂದೆ ಸಿದ್ದರಾಮಯ್ಯ ಭೇಟಿ ನೀಡುವ ಮೂಲಕ ಮೌಢ್ಯವನ್ನು ಸಂಪೂರ್ಣವಾಗಿ ತೊಡೆದು ಹಾಕಿದ್ದರು. ಇದೀಗ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಆರಂಭದಲ್ಲೇ ಧೈರ್ಯವಾಗಿ ಬರುತ್ತಿದ್ದಾರೆ. ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಹೊಸ ಅಭಿವೃದ್ಧಿ ಪರ್ವ ಆರಂಭವಾಗಲಿದೆ.
- ಎ.ಆರ್. ಕೃಷ್ಣಮೂರ್ತಿ ಶಾಸಕ, ಕೊಳ್ಳೇಗಾಲ.


