ಸಾರಾಂಶ
ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಉಪಮುಖ್ಯಮಂತ್ರಿ ಆಮಿಷವೊಡ್ಡಿದ್ದರು, ಇಲ್ಲದಿದ್ದರೆ ಜೈಲಿಗೆ ಕಳುಹಿಸುವ ಬೆದರಿಕೆ ಹಾಕಿದ್ದರು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು : ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಉಪಮುಖ್ಯಮಂತ್ರಿ ಆಮಿಷವೊಡ್ಡಿದ್ದರು, ಇಲ್ಲದಿದ್ದರೆ ಜೈಲಿಗೆ ಕಳುಹಿಸುವ ಬೆದರಿಕೆ ಹಾಕಿದ್ದರು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ನಮಗೆ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತಂದು ಡಿಸಿಎಂ ಮಾಡುವ ದರ್ದು ಇಲ್ಲ ಕಿಡಿಕಾರಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೊಡ್ಡವರಾಗಲು ಅವರು, ಇವರು ಕರೆ ಮಾಡಿದ್ದರು ಎಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ದೆಹಲಿಯಿಂದ ಕರೆ ಮಾಡಿದ್ದು ಯಾರು ಎಂಬುದನ್ನು ಪತ್ತೆ ಹಚ್ಚಿ. ಕರೆ ಮಾಡಿದವರನ್ನು ಒಳಗೆ ಹಾಕಿ. ನಿಮ್ಮ ಕಾರ್ಯಕರ್ತರಿಂದಲೇ ಕರೆ ಮಾಡಿಸಿಕೊಂಡು ಬಿಜೆಪಿ ಮೇಲೆ ಹಾಕಬೇಡಿ. ಸುಮ್ಮನೆ ಪ್ರಚಾರಕ್ಕಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಹೆಸರು ಬಳಸಬೇಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.
ನಮಗೆ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತಂದು ಡಿಸಿಎಂ ಮಾಡುವ ದುರ್ದು ಇಲ್ಲ. ನಮ್ಮ ಪಕ್ಷ ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ನಮ್ಮ ಪ್ರಧಾನಿ ಬಂದಾಗ ಎಲ್ಲರನ್ನೂ ಮಾತನಾಡಿಸುತ್ತಾರೆ. ಚುನಾವಣೆ ಸಮಯದಲ್ಲಿ ಚುನಾವಣೆ. ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗ ಡಿಸಿಎಂ ಎಂಬ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಮಾತನಾಡಿಸಿದ್ದರು. ಹೀಗೆ ಎಲ್ಲರನ್ನೂ ಮೋದಿ ಮಾತನಾಡಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಉತ್ತರಿಸಿದರು.