ಸಾರಾಂಶ
ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ಪ್ರಕರಣ ಸಂಬಂಧ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ಅದಕ್ಕೆ ಸಂಬಂಧಿಸಿದಂತೆ ನಗರದ 5ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
‘ಸಚಿವರು ನೀಡಿರುವ ಇಂತಹದೇ ಹೇಳಿಕೆ ಸಂಬಂಧ ತಮಿಳುನಾಡಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ 2024ರ ಸೆ.5ರಂದು ರದ್ದುಗೊಳಿಸಿದೆ. ಈ ಪ್ರಕರಣವೂ ಸಹ ಅದೇ ಘಟನೆಗೆ ಸಂಬಂಧಿಸಿದೆ. ಹಾಗಾಗಿ, ಮದ್ರಾಸ್ ಹೈಕೋರ್ಟ್ ಆದೇಶದ ಆಧಾರದ ಮೇಲೆ ಶೋಭಾ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲಾಗುತ್ತಿದೆ’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.