ಸಾರಾಂಶ
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ದಬ್ಬಾಳಿಕೆ ನಡೆಸುತ್ತಿದ್ದು, ಅವರನ್ನು ಗಡಿಪಾರು ಮಾಡಿದರೆ ಒಳಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಚಿತ್ರದುರ್ಗ/ಸಂಡೂರು : ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ದಬ್ಬಾಳಿಕೆ ನಡೆಸುತ್ತಿದ್ದು, ಅವರನ್ನು ಗಡಿಪಾರು ಮಾಡಿದರೆ ಒಳಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಆಸ್ತಿ, ರೈತರ ಜಮೀನು, ಮಠ-ಮಾನ್ಯಗಳ ಆಸ್ತಿ ಕಬಳಿಸುವ ಹುನ್ನಾರ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಲಿ ಎಂದರು.
ಸಚಿವ ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ, ಗುಂಡಾಗಿರಿ ಮಾಡಿ ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆಗೆ ತಾಕೀತು ಮಾಡಿದ್ದಾರೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡುತ್ತಿದ್ದಾರೆ. ಶಾಂತಿಯುತ ರಾಜ್ಯದಲ್ಲಿ ಮಂತ್ರಿಯಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಆದ್ದರಿಂದ ಇಂತವರನ್ನು ಗಡಿಪಾರು ಮಾಡಿದರೆ ಒಳಿತು ಎಂದರು.
ಇದಕ್ಕೂ ಮೊದಲು ಸಂಡೂರಿನಲ್ಲಿ ಮಾತನಾಡಿದ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಬೆಂಗಳೂರಿನಿಂದ ಬಳ್ಳಾರಿವರೆಗೆ ಸಿದ್ದರಾಮಯ್ಯ ಈ ಹಿಂದೆ ಪಾದಯಾತ್ರೆ ಮಾಡಿದ್ದು ಕೇವಲ ಅಧಿಕಾರಕ್ಕಾಗಿ. ಅಧಿಕಾರಕ್ಕೆ ಬಂದ ಮೇಲೆ ಇವರು ಏನು ಕಡಿದು ಕಟ್ಟೆ ಹಾಕಿದ್ದಾರೆ?. ಅಹಿಂದ ಹೆಸರು ಹೇಳಿಕೊಂಡು ಕೇವಲ ಸಮಾವೇಶ ಮಾಡಿದರೇ ಹೊರತು ಯಾವ ಅಭಿವೃದ್ಧಿಯನ್ನೂ ಮಾಡಿಲ್ಲ. ಹಿಂದುಳಿದ ವರ್ಗವನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂದರು.
ಇಂದು ನೌಕರರ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ಹಣವಿಲ್ಲ. ವಿವಿಧ ನಿಗಮಗಳ ಹಣಕ್ಕೆ ಕತ್ತರಿ ಹಾಕುತ್ತಿದ್ದಾರೆ. ಯಡಿಯೂರಪ್ಪ ಆರಂಭಿಸಿದ್ದ ಭಾಗ್ಯಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿಗೆ ಸರ್ಕಾರ ಹಣ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ದೂರುತ್ತಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಉದ್ಭವಿಸಿದೆ ಎಂದರೆ, ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಛೀಮಾರಿ ಹಾಕಿದ್ದಾರೆ ಎಂದು ಸರ್ಕಾರದ ಆಡಳಿತ ಕ್ರಮವನ್ನು ಟೀಕಿಸಿದರು.