ಸಾರಾಂಶ
ಸಮಾಜಘಾತಕ ಶಕ್ತಿಗಳನ್ನು ಮಟ್ಟ ಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾವೇರಿ : ಸಮಾಜಘಾತಕ ಶಕ್ತಿಗಳನ್ನು ಮಟ್ಟ ಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ಹಾವೇರಿ ಜಿಲ್ಲೆಯ ಅಕ್ಕಿಆಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ ₹25 ಲಕ್ಷ ಪರಿಹಾರ ನೀಡಿತ್ತು. ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ತಿಳಿದಿಲ್ಲ. ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.