ಸಾರಾಂಶ
ಈ ಬಾರಿಯ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ತಯಾರಿ ಆರಂಭಿಸಿದ್ದು, ಪಕ್ಷದ ಮುಖಂಡರಿಗೆ ಅಭ್ಯರ್ಥಿಯಾರಾದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಿ ಎಂದು ಸೂಚನೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಲೋಕಸಭಾ ಚುನಾವಣೆ ಸಿದ್ಧತೆ ಕುರಿತಂತೆ ಎರಡು ದಿನಗಳ ಕಾಲ ನಡೆದ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳ ಬಿಜೆಪಿ ಮುಖಂಡರ ಸಭೆ ಮುಕ್ತಾಯಗೊಂಡಿದ್ದು, ಪಕ್ಷದಿಂದ ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿಸುವ ಸಲುವಾಗಿ ಗೆಲ್ಲಿಸಬೇಕು ಎಂಬ ಸೂಚನೆ ನೀಡಲಾಗಿದೆ.
ನಗರದ ಯಲಹಂಕ ಬಳಿಯಿರುವ ರೆಸಾರ್ಟ್‌ವೊಂದರಲ್ಲಿ ಬುಧವಾರ ಮತ್ತು ಗುರುವಾರ ನಡೆದ 28 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ ಏಳು ಕ್ಲಸ್ಟರ್‌ಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಸಿ.ಟಿ.ರವಿ ಮತ್ತಿತರರು ಪಕ್ಷ ಗೆಲ್ಲುವ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ತಮ್ಮ ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿನ ಪಕ್ಷದ ಸಂಘಟನೆಯ ಪರಿಸ್ಥಿತಿಯನ್ನು ವಿವರಿಸಿ ಚುನಾವಣೆ ಗೆಲ್ಲುವ ಬಗ್ಗೆ ಹಲವು ಸಲಹೆಗಳನ್ನು ನೀಡಿದರು. ಅಲ್ಲದೆ, ಮೋದಿ ನಾಯಕತ್ವದ ಅಗತ್ಯತೆ ಮತ್ತು ಕೇಂದ್ರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಕುರಿತು ಹೆಚ್ಚು ಪ್ರಚಾರ ಮಾಡಬೇಕಾಗಿದೆ.
ಅಲ್ಲದೆ, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಮನವಿ ಮಾಡಿದರು ಎನ್ನಲಾಗಿದೆ.ಜತೆಗೆ ಅಭ್ಯರ್ಥಿಗಳು ಯಾರು ಎಂಬುದರ ಬಗ್ಗೆ ಆದಷ್ಟು ಬೇಗ ಸ್ಪಷ್ಟತೆ ಕೊಡಬೇಕು.
ಇಲ್ಲದಿದ್ದರೆ ಕಳೆದ ವಿಧಾನಸಭಾ ಚುನಾವಣೆಯಂತೆ ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ನೀಡಿದರೆ ಅದು ಪಕ್ಷದ ಸೋಲಿಗೆ ಕಾರಣವಾಗಬಹುದು ಎಂಬ ಆತಂಕವನ್ನೂ ಹಲವು ಮುಖಂಡರು ವ್ಯಕ್ತಪಡಿಸಿದರು.
ಪಕ್ಷದಲ್ಲಿನ ಕೆಲವು ಹಿರಿಯ ನಾಯಕರ ಅಸಮಾಧಾನವನ್ನು ಹೋಗಲಾಡಿಸಬೇಕು ಎಂಬ ಮನವಿಯನ್ನೂ ಮಾಡಿದರು ಎಂದು ಮೂಲಗಳು ತಿಳಿಸಿವೆ.
ಮುಖಂಡರ ಅಭಿಪ್ರಾಯಗಳನ್ನು ಆಲಿಸಿದ ರಾಜ್ಯ ನಾಯಕರು ಶೀಘ್ರದಲ್ಲೇ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಮನವಿ ಮಾಡಲಾಗುವುದು ಎಂಬ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.