ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ, ರಾಹುಲ್‌ ಗಾಂಧಿ ಅವರ ಮಾರ್ಗರ್ಶನ, ಸಿದ್ದರಾಮಯ್ಯ ಮತ್ತು ಎಲ್ಲರ ಶ್ರಮದಿಂದ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ 

 ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ, ರಾಹುಲ್‌ ಗಾಂಧಿ ಅವರ ಮಾರ್ಗರ್ಶನ, ಸಿದ್ದರಾಮಯ್ಯ ಮತ್ತು ಎಲ್ಲರ ಶ್ರಮದಿಂದ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಸಚಿವ ಸತೀಶ್‌ ಜಾರಕಿಹೊಳಿ ಜತೆಗಿನ ಭೇಟಿ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಅವರ ಜತೆಗೆ 2028ರಲ್ಲೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದರು.

ನಾವಿಬ್ಬರೂ ಆತ್ಮೀಯ ಸ್ನೇಹಿತರು:

ನಾನು ಪಕ್ಷದ ಅಧ್ಯಕ್ಷನಾಗಿ ನಾನು, ಸತೀಶ್‌ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ, ನಾವಿಬ್ಬರೂ ಆತ್ಮೀಯ ಸ್ನೇಹಿತರು. ಇಬ್ಬರ ಬಾಂಧವ್ಯ ಚೆನ್ನಾಗಿದೆ. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಾನು ಮತ್ತು ಸತೀಶ್‌ ಇಬ್ಬರೂ ಪ್ರಸ್ತುತ ಸಂಪುಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಅವರು ಪಕ್ಷದ ದೊಡ್ಡ ಆಸ್ತಿ. 2028 ಮತ್ತು 2029ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುವ ಕುರಿತು ಇಬ್ಬರೂ ಚರ್ಚೆ ಮಾಡಿದ್ದೇವೆ ಎಂದರು.

ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ

ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಉಳಿದ ಎರಡೂವರೆ ವರ್ಷಗಳಲ್ಲಿ ಏನೇನು ಕೆಲಸ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ಅದನ್ನು ಬಿಟ್ಟರೆ ಬೇರೆ ಯಾವುದೇ ವಿಶೇಷ ಮಾತುಕತೆ ನಡೆಸಿಲ್ಲ ಎಂದರು.