ಘನ ತ್ಯಾಜ್ಯ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ ನೀಡಿದ್ದಾರೆ.ಕೇಂದ್ರ ಪಾಲಿಕೆ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು
ಬೆಂಗಳೂರು : ಘನ ತ್ಯಾಜ್ಯ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ ನೀಡಿದ್ದಾರೆ.
ಪ್ರಗತಿ ಪರಿಶೀಲನೆ ಸಭೆ
ಕೇಂದ್ರ ಪಾಲಿಕೆ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕೇಂದ್ರ ನಗರ ಪಾಲಿಕೆಯು ಬೆಂಗಳೂರು ನಗರದ ಹೃದಯ ಭಾಗದಲ್ಲಿದ್ದು, ಪ್ರತಿನಿತ್ಯ ಕಸ ತೆರವು ಕಾರ್ಯವು ಸಮರ್ಪಕವಾಗಿ ನಿರ್ವಹಣೆ ಆಗಬೇಕು. ಈ ಬಗ್ಗೆ ನಿತ್ಯ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬ್ಲ್ಯಾಕ್ ಸ್ಪಾಟ್‌ಗಳನ್ನು ಶಾಶ್ವತವಾಗಿ ನಿರ್ಮೂಲನೆಗೆ ಕ್ರಮ ವಹಿಸಬೇಕು
ತ್ಯಾಜ್ಯ ಬ್ಲ್ಯಾಕ್ ಸ್ಪಾಟ್ ಗಳು ಹೆಚ್ಚಾಗಿ ಇರುವ ಸ್ಥಳಗಳನ್ನು ಗುರುತಿಸಿ, ಪಟ್ಟಿ ಮಾಡಿ ಅವುಗಳನ್ನು ತೆರವುಗೊಳಿಸುವುದು ಹಾಗೂ ಸದರಿ ಬ್ಲ್ಯಾಕ್ ಸ್ಪಾಟ್‌ಗಳನ್ನು ಶಾಶ್ವತವಾಗಿ ನಿರ್ಮೂಲನೆಗೆ ಕ್ರಮ ವಹಿಸಬೇಕು. ಪ್ರತಿ ಬೀದಿಗಳಿಗೆ ನಿಯೋಜನೆ ಮಾಡಿದ ಸ್ವಚ್ಛತೆ ಸಿಬ್ಬಂದಿ ವಿವರವನ್ನು ಹಾಗೂ ಅವರು ಅಲ್ಲಿ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಬಗ್ಗೆ ಮೇಲುಸ್ತುವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈಗಾಗಲೇ ಸಾಕಷ್ಟು ಬಾರಿ ಸಮರ್ಪಕವಾಗಿ ನಿರ್ವಹಣೆ ಮಾಡಲು ಸೂಚನೆ ನೀಡಿದಾಗಲೂ ಹಲವು ಅಧಿಕಾರಿಗಳು, ಸಿಬ್ಬಂದಿ ಸರಿಯಾಗಿ ಕಾರ್ಯಹಿಸುತ್ತಿಲ್ಲ. ಅಂತಹವರನ್ನು ಸ್ಥಳ ಬದಲಾವಣೆ ಹಾಗೂ ಸಮರ್ಪಕ ಕಾರ್ಯ ನಿರ್ವಹಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.
ಆಟೋ ಟಿಪ್ಪರ್‌ಗಳು ನಿಗದಿತ ವೇಳೆಯಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಣೆ ಮಾಡಬೇಕು. ಜನರು ಆಟೋ ಟಿಪ್ಪರ್ ಗಳಿಗೆ ಕಸ ತಂದು ಕೊಡುವಂತೆ ಜನರಿಗೆ ತಿಳಿಸಬೇಕೆಂದು ಸೂಚಿಸಿದರು.

