ಲೋಕಸಭೆ ಚುನಾವಣೆ ಸಿದ್ಧತೆ ಆರಂಭಕ್ಕೆ ಇಂದು ಬಿಜೆಪಿ ಸಭೆ

| Published : Jan 08 2024, 01:45 AM IST

ಸಾರಾಂಶ

ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಪಣ ತೊಟ್ಟಿರುವ ಬಿಜೆಪಿ ಇದಕ್ಕಾಗಿ ಸಿದ್ದತೆ ಸಭೆ ನಡೆಸಲು ತೀರ್ಮಾನಿಸಿದೆ, ಬೆಂಗಳೂರಿನ ರೆಸಾರ್ಟ್‌ಗಳಲ್ಲಿ 50 ನಾಯಕರು ಸಭೆ ನಡೆಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರುಸತತ 3ನೇ ಬಾರಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಲು ಮುಂದಾಗಿರುವ ರಾಜ್ಯ ಬಿಜೆಪಿಯು ಸೋಮವಾರ ಪಕ್ಷದ ಹಿರಿಯ ಮುಖಂಡರ ಚಿಂತನ ಸಭೆ ನಡೆಸಲಿದೆ.ನಗರದ ಯಲಹಂಕ ಬಳಿಯಿರುವ ರೆಸಾರ್ಟ್‌ವೊಂದರಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ನಡೆಯುವ ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.ಲೋಕಸಭಾ ಚುನಾವಣೆ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಸಲು ಉದ್ದೇಶಿಸಲಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಲೋಪದೋಷಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ.ಲೋಕಸಭಾ ಚುನಾವಣೆಗೆ ಪೂರಕವಾಗಿ ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಧಿಕೃತವಾಗಿದ್ದು, ಕ್ಷೇತ್ರಗಳ ಹಂಚಿಕೆ ಬಾಕಿ ಉಳಿದಿದೆ. ಮೈತ್ರಿ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಹೊಂದಾಣಿಕೆ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್‌, ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.